ಭ್ರಷ್ಟಾಚಾರ ಆರೋಪ ಪ್ರಕರಣ: ಯಡಿಯೂರಪ್ಪ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನ ತನಿಖೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.
ಯಡಿಯೂರಪ್ಪ ಮತ್ತು ಇತರರ ವಿರುದ್ಧದ ದೂರನ್ನು ಮರುಸ್ಥಾಪಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಖಾಸಗಿ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ.
ಯಡಿಯೂರಪ್ಪ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಮುಕುಲ್‌ ರೊಹಟಗಿ ಹಾಗೂ ಸಿದ್ಧಾರ್ಥ ದವೆ ಅವರು, ಜನಪ್ರತಿನಿಧಿಗಳ ಮೇಲೆ ಎಫ್‌ಐಆರ್ ದಾಖಲಿಸುವ ಮೊದಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ನಿಯಮವನ್ನು ಹೈಕೋರ್ಟ್‌ ನಿರ್ಲಕ್ಷಿಸಿದೆ ಎಂದರು. ದೂರುದಾರ ಅಬ್ರಾಹಂ ಪರ ವಕೀಲರು, ಅಪರಾಧ ದಂಡ ಸಂಹಿತೆಯ ಸೆಕ್ಷನ್‌ 156 (3) ಅನ್ವಯ ದಾಖಲಾದ ದೂರುಗಳಿಗೆ ಪೂರ್ವಾನುಮತಿಯ ನಿಯಮ ಅನ್ವಯವಾಗುವುದಿಲ್ಲ ಎಂದು ಕಾನೂನಿನ ಇತ್ತೀಚಿನ ತಿದ್ದುಪಡಿ ತಿಳಿಸುತ್ತದೆ ಎಂದು ತಿಳಿಸಿದರು. ಅದಕ್ಕೆ ನ್ಯಾಯಪೀಠವು ಈ ಕುರಿತು ಪರಿಶೀಲಿಸುವುದಾಗಿ ತಿಳಿಸಿತು.

ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 7 ರಂದು ಮರುಸ್ಥಾಪಿಸಿತು. ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿತ್ತು, ಏಕೆಂದರೆ ಆಗಿನ ರಾಜ್ಯಪಾಲರು ಅದಕ್ಕೆ ಅನುಮತಿ ನೀಡಲು ನಿರಾಕರಿಸಿದ್ದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಗುತ್ತಿಗೆ ನೀಡುವುದಕ್ಕೆ ಪ್ರತಿಯಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿ ಮತ್ತು ಇತರ ಶೆಲ್ ಕಂಪನಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement