ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಈ ವಿಧೇಯಕಕ್ಕೆ ಸೆಪ್ಟೆಂಬರ್ 28ರಂದು ರಾಜ್ಯಪಾಲರು ಅಂಕಿತ ಹಾಕಿದ್ದು, ಅದನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರಂದು ರಾಜ್ಯಪತ್ರದಲ್ಲಿ ಪ್ರಕಟಿಸಿದೆ.
ಕಳೆದ ವರ್ಷ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರಪಡೆಯಲಾಗಿತ್ತು. ಆದರೆ, ವಿಧಾನಪರಿಷತ್ತಿನಲ್ಲಿ ಅಂಗೀಕಾರ ಸಾಧ್ಯವಾಗಿರಲಿಲ್ಲ. ಇದೇ ಸೆಪ್ಟೆಂಬರ್ 17ರಂದು ಕೆಲವು ತಿದ್ದುಪಡಿಗಳೊಂದಿಗೆ ವಿಧಾನಪರಿಷತ್ತಿನಲ್ಲಿ ವಿಧೇಯಕ ಅಂಗೀಕಾರಗೊಂಡಿತ್ತು.
ನಂತರ ಸೆಪ್ಟೆಂಬರ್ 21ರಂದು ಪುನಃ ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಳ್ಳಲಾಗಿತ್ತು. ಈಗ ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅಧಿಕೃತ ಮುದ್ರೆ ಬಿದ್ದಿದೆ.
ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ರಕ್ಷಣೆಗಾಗಿ, ತಪ್ಪು ನಿರೂಪಣೆ, ಬಲವಂತ ಹಾಗೂ ಇತರ ಯಾವುದೇ ವಂಚನೆ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರವಾಗಿ ಮತಾಂತರ ಮಾಡುವುದನ್ನು ತಡೆಯಲು ಈ ನಿಯಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿಧೇಯಕದಲ್ಲಿ ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ