ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ, ಐಸಿಯುಗೆ ದಾಖಲು

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದು, ಅವರನ್ನು ಭಾನುವಾರ ಗುರುಗ್ರಾಮದ  ಮೇದಾಂತ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ವರ್ಗಾಯಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
82 ವರ್ಷದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂಲಗಳ ಪ್ರಕಾರ ಇಂದು, ಭಾನುವಾರ ಬೆಳಗ್ಗೆ ಮುಲಾಯಂ ಸಿಂಗ್‌ ಯಾದವ್‌ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಚಿಕಿತ್ಸೆ ಮುಂದುವರಿದಿದೆ.
ಮೂಲಗಳ ಪ್ರಕಾರ, ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂಟರ್ನಲ್ ಮೆಡಿಸಿನ್‌ನಲ್ಲಿ ಪರಿಣಿತರಾಗಿರುವ ಡಾ. ಸುಶೀಲಾ ಕಟಾರಿಯಾ ಅವರು ಪ್ರಸ್ತುತ ಅವರನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮುಲಾಯಂ ಅವರು ವಯಸ್ಸಿಗೆ ಸಂಬಂಧಿಸಿದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ, ಅದರಲ್ಲಿ ಅತ್ಯಂತ ಗಂಭೀರವಾದದ್ದು ಮೂತ್ರನಾಳದ ಸೋಂಕು .ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮುಲಾಯಂ ಅವರ ಹಿರಿಯ ಮಗ ಅಖಿಲೇಶ್ ಯಾದವ್ ಅವರು ದೆಹಲಿಗೆ ಬರುತ್ತಿದ್ದಾರೆ.
ಮುಲಾಯಂ ಅವರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಅವರು ಭಾರತ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದರು. ಅವರು ದೀರ್ಘಕಾಲ ಸೇವೆ ಸಲ್ಲಿಸಿದ ಸಂಸದರಾಗಿದ್ದು, ಪ್ರಸ್ತುತ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಈ ಹಿಂದೆ ಅಜಂಗಢ ಮತ್ತು ಸಂಭಾಲ್ ಕ್ಷೇತ್ರಗಳ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ನೇತಾಜಿ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಯಾದವ್ ಅವರು 1967 ರಲ್ಲಿ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಮೊದಲ ಬಾರಿಗೆ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾದರು.

ಪ್ರಮುಖ ಸುದ್ದಿ :-   ಮನೆ ಮುಂದೆಯೇ ಗುಂಡು ಹಾರಿಸಿ ಬಿಜೆಪಿ ನಾಯಕ-ಖ್ಯಾತ ಉದ್ಯಮಿ ಗೋಪಾಲ ಖೇಮ್ಕಾ ಹತ್ಯೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement