ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಇನ್ನೂ ನಿಂತಿಲ್ಲ. ರಾಜ್ಯದ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಸಮುದ್ರದ ಭಾಗದ ಆಂಧ್ರ ಪ್ರದೇಶದ ಉತ್ತರ ಕರಾವಳಿಯಲ್ಲಿ ಎದ್ದಿದ್ದ ಮೇಲ್ಮೈ ಸುಳಿಗಾಳಿಯು ದಕ್ಷಿಣ ಕರಾವಳಿಯತ್ತ ಸಾಗಿದೆ. ಅದು ಸಮುದ್ರ ಮಟ್ಟದಿಂದ ಸುಮಾರು 3.5ಕಿಲೋ ಮೀಟರ್ ಎತ್ತರದಲ್ಲಿದೆ. ಅದೇ ರೀತಿ ಬಂಗಾಳ ಕೊಲ್ಲಿ ಪಶ್ಚಿಮ ಸಮುದ್ರ ಭಾಗದಲ್ಲಿ ಉಂಟಾಗಿದ್ದ ಮತ್ತೊಂದು ಮೇಲ್ಮೈ ಸುಳಿಗಾಳಿಯು ದುರ್ಬಲಗೊಂಡಿಲ್ಲ. ಈ ಕಾರಣದಿಂದ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮುನ್ಸೂಚನೆಗಳ ಪ್ರಕಾರ ಇಂದಿನಿಂದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ದಾವಣೆಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮತ್ತೆ ಶುರುವಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹೇಳಲಾಗಿದೆ. ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ ಎಂದು ತಿಳಿಸಲಾಗಿದೆ.
ಕಲಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಕೊಪ್ಪಳದಲ್ಲಿ ಇಂದಿನಿಂದ ಮಳೆಯಾಗುವ ಮುನ್ಸೂಚನೆ ಇದ್ದು, ಅಕ್ಟೋಬರ್ 10ರಂದು ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರವಾಗಿ ಮಳೆ ಸುರಿಯುವ ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

 

 

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement