ನಾಳೆಯಿಂದ ಬೊಮ್ಮಾಯಿ, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾ ಪ್ರವಾಸ ಆರಂಭ

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಮತ್ತೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಆಡಳಿತಾರೂಢ ಬಿಜೆಪಿ, ನಾಳೆ, ಮಂಗಳವಾರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಯಚೂರಿನಿಂದ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಲಿದೆ. ವಿಜಯ ಸಂಕಲ್ಪ ಯಾತ್ರೆ ಗಿಲ್ಲೇಸೂಗೂರು ಗ್ರಾಮದಿಂದ ಶುರುವಾಗಲಿದೆ. ರಾಜ್ಯಾದ್ಯಂತ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದೆ.
140 ಕ್ಷೇತ್ರದಲ್ಲಿ ರಾಜ್ಯ ನಾಯಕರ ಪ್ರವಾಸ ಮಾಡಲಿದ್ದು, ಬೇರೆಬೇರೆ ಸ್ಥಳಗಳಲ್ಲಿ ಏಳು ಬೃಹತ್ ಸಮಾವೇಶಗಳನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಿದೆ. ಚುನಾವಣಾ ದೃಷ್ಟಿಯಿಂದ ಬಿಜೆಪಿ ಎರಡು ತಂಡಗಳಲ್ಲಿ ಪ್ರವಾಸ ಹಮ್ಮಿಕೊಂಡಿದೆ.

ಒಂದು ತಂಡದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಪ್ರವಾಸ ಮಾಡಲಿದ್ದಾರೆ. 90 ಕ್ಷೇತ್ರಗಳಲ್ಲಿ ಈ ತಂಡ ಪ್ರವಾಸ ಕೈಗೊಳ್ಳಲಿದೆ. ನಾಳೆಯಿಂದ ಪ್ರವಾಸ ಆರಂಭವಾಗಲಿದ್ದು, ವಾರದಲ್ಲಿ ಮೂರು ದಿನಗಳ ಕಾಲ ಪ್ರವಾಸ ನಡೆಯಲಿದೆ. ಇದು ರಾಯಚೂರಿನಿಂದ ಆರಂಭವಾಗಲಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲು ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಎರಡನೇ ತಂಡ ಪ್ರವಾಸ ಮಾಡಲಿದೆ. ಡಿಸೆಂಬರ್ ಅಂತ್ಯದ ವೇಳೆಗೆ 165 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲು ನಾಯಕರು ಯೋಜಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಪ್ರವಾಸದ ವೇಳೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳನ್ನು ಭೇಟಿ ಮಾಡಲಿದ್ದು, ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ಹಾಗೂ ಸಂವಾದ ನಡೆಸಲಿದ್ದಾರೆ. ಪ್ರವಾಸ ಸಮಯದಲ್ಲಿ ಕ್ಷೇತ್ರಗಳ ಜಾತಿ ಪ್ರಮುಖರ ಭೇಟಿ, ಮಠ ಹಾಗೂ ಮಂದಿರಗಳ ಭೇಟಿ ಮತ್ತು ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ.
ಕಲಬುರಗಿಯಲ್ಲಿ ಹಿಂದುಳಿದ ವರ್ಗಳ ಸಮಾವೇಶ, ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶ, ಮೈಸೂರಿನಲ್ಲಿ ಪರಿಶಿಷ್ಟ ಜಾತಿಗಳ ಸಮಾವೇಶ, ಹುಬ್ಬಳ್ಳಿಯಲ್ಲಿ ರೈತ ಸಮಾವೇಶ, ಬೆಂಗಳೂರಿನಲ್ಲಿ ಮಹಿಳಾ ಸಮಾವೇಶ ಮತ್ತು ಮಂಗಳೂರಿನಲ್ಲಿ ಯುವ ಸಮಾವೇಶ ನಡೆಸಲಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement