ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4- 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ (ನ. 2) ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. , ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಬೆಂಗಳೂರು ಗ್ರಾಮಾಂತರ, ತುಮಕೂರು,ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಮೊದಲಾದ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ನವೆಂಬರ್ 3ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 3 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅದರಲ್ಲೂ ಮುಖ್ಯವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ತುಮಕೂರು, ಕೋಲಾರ, ಮೈಸೂರು, ಚಾಮರಾಜನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾದರೆ, ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಚೆನ್ನೈನಲ್ಲಿ ದಾಖಲೆಯ ಮಳೆ
ಹಿಂಗಾರು ಮಳೆ ಆರ್ಭಟಕ್ಕೆ ತಮಿಳುನಾಡಿನ ಆರು ಜಿಲ್ಲೆಗಳು ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಚೆನ್ನೈನ ಬಹುತೇಕ ಪ್ರದೇಶಗಳು ಮುಳುಗಡೆಯಾಗಿವೆ. ಮಂಗಳವಾರ ಚೆನ್ನೈನಲ್ಲಿ 30 ವರ್ಷಗಳಲ್ಲೇ ಅತ್ಯಧಿಕ 8.4 ಸೆಂ.ಮೀ ಮಳೆಯಾಗಿದೆ. ತಂಜಾವೂರು, ತಿರುವರೂರು, ನಾಗಪಟ್ಟಣಂ, ಕಾಂಚೀಪುರಂ, ತಿರುವಳ್ಳೂರು ಹಾಗೂ ಚೆಂಗಲ್‌ಪೇಟೆಯಲ್ಲೂ ಭಾರಿ ಮಳೆಯಾಗಿದೆ. ಆರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ