ಯಾರೇ ಆದರೂ ಈ ಬಾರಿ ಒಬ್ಬರಿಗೆ ಒಂದೇ ಟಿಕೆಟ್ : ಡಿ.ಕೆ. ಶಿವಕುಮಾರ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರೇ ಆಗಲಿ ಅವರಿಗೆ ಒಂದೇ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿಯಂತೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಂತಾಗಿದೆ.
ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನೂರಾರು ಜನರು ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ನೀಡಲಾಗುತ್ತದೆ. ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ನಾವು ಕೆಲ ಮಾರ್ಗದರ್ಶನಗಳನ್ನು ಆಕಾಂಕ್ಷಿಗಳಿಗೆ ನೀಡುತ್ತೇವೆ. ಆದೇ ರೀತಿ ಅವರು ಕೆಲಸ ಮಾಡಿಕೊಂಡು ಹೋಗಬೇಕು ಎಂದು ತಿಳಿಸಿದರು.

ಅರ್ಜಿ ಆಹ್ವಾನ, ದೇಣಿಗೆ ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಈ ಬಾರಿ ಹೆಚ್ಚು ಸುದ್ದಿಯಾಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದರು.
ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದವರ ಹಿನ್ನೆಲೆ ಏನು? ಪಕ್ಷಕ್ಕೆ ಅವರು ಹೇಗೆ ಕೆಲಸ ಮಾಡಿದ್ದಾರೆ? ಕೆಲಸ ಮಾಡಲು ಏನು ಯೋಜನೆ ಹಾಕಿಕೊಂಡಿದ್ದಾರೆ ಇತ್ಯಾದಿ ಸಂಗತಿಗಳ ಬಗ್ಗೆ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅಭ್ಯರ್ಥಿ ಆಕಾಂಕ್ಷಿಗಳ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement