ಗಡಿಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ 100 ಕೋಟಿ ರೂ., ಗಡಿಭಾಗದ ಜಿಲ್ಲೆಗಳ 1800 ಗ್ರಾಪಂಗಳ ಸಂಪೂರ್ಣ ಅಭಿವೃದ್ಧಿ: ಸಿಎಂ ಬೊಮ್ಮಾಯಿ

ಬೆಳಗಾವಿ: ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗಡಿಯಾಚೆ ಇರುವವರು ನಮ್ಮವರು; ಅಲ್ಲಿನ ಕನ್ನಡ ಶಾಲೆಗಳನ್ನು ಅಲ್ಲಿನ ರಾಜ್ಯ ಸರಕಾರ ಕಡೆಗಣಿಸಿರುವುದರಿಂದ ಮೂಲಸೌಕರ್ಯ ಕಲ್ಪಿಸುವುದು ಸಾಧ್ಯವಾಗಿರುವುದಿಲ್ಲ. ಗಡಿಭಾಗದ ಕನ್ನಡ ಶಾಲೆಗಳ ಅಭಿವೃದ್ದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಇದೇ ವರ್ಷ 100 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಕನ್ನಡದ ಶಾಲೆಗಳ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಪಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂಪನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ಶುಕ್ರವಾರ (ಡಿ.2) ರಾಮದುರ್ಗ ತಾಲೂಕಿನ ಅಂದಾಜು 671.28 ರೂ. ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಗೋವಾದಲ್ಲಿ ಹತ್ತು ಕೋಟಿ‌ ರೂಪಾಯಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಅದೇ ರೀತಿ ಸೊಲ್ಲಾಪುರ ಹಾಗೂ ಕಾಸರಗೋಡಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಲಾ ಹತ್ತು ಕೋಟಿ ರೂಪಾಯಿಗಳನ್ನು ಸರ್ಕಾರ ನೀಡಲಿದೆ ಎಂದರು.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ಗಡಿಭಾಗದ ಜಿಲ್ಲೆಗಳ 1800 ಗ್ರಾಪಂಗಳ ಸಂಪೂರ್ಣ ಅಭಿವೃದ್ಧಿ
ನಮ್ಮ ಸರ್ಕಾರ ಸಮಗ್ರ ಕರ್ನಾಟಕದ ಚಿಂತನೆ ಮಾಡಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕದ ನಡುಭಾಗದಿಂದ ಹಿಡಿದು ಗಡಿಭಾಗದ ವರೆಗೆ ಅಭಿವೃದ್ಧಿಯನ್ನು ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳ ಗಡಿ ಭಾಗದ ಗ್ರಾಮಗಳಲ್ಲಿ ಎರಡು ನೂತನ ಕಾರ್ಯಕ್ರಮ ರೂಪಿಸಿದೆ. ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಗೋವಾ ಹಾಗೂ ತೆಲಂಗಾಣ ರಾಜ್ಯದ ಗಡಿಭಾಗದಲ್ಲಿರುವ ರಾಜ್ಯದ ಜಿಲ್ಲೆಗಳಲ್ಲಿ 1800 ಗ್ರಾಪಂಗಳನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ಕಾರ್ಯಕ್ರಮಗಳನ್ನು ಈ ವರ್ಷದಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಗಡಿ ಭಾಗದ ಸಮಗ್ರ ರಸ್ತೆಗಳ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ಗಡಿ ಭಾಗದ ಗ್ರಾಮಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರೂಪಿಸಿರುವ ಜಲ ಜೀವನ ಮಿಷನ್ ಯೋಜನೆಯಡಿ ಈ ವರ್ಷ ಗಡಿ ಭಾಗದ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಿದೆ ಎಂದು ಹೇಳಿದರು.

ಕನ್ನಡ ನಾಡಿನ ಭಕ್ತರು ಭೇಟಿ ನೀಡುವ ಪುಣ್ಯಕ್ಷೇತ್ರಗಳಾದ ಪಾಂಡರಾಪುರ, ತುಳಜಾಪುರ, ಶ್ರೀಶೈಲ, ಅಯ್ಯಪ್ಪ ದೇವಾಲಯಗಳಲ್ಲಿ ಯಾತ್ರಿ ನಿವಾಸ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ ಎಂದರು.
ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯು ರಾಜ್ಯದ ಕಿರೀಟವಿದ್ದಂತೆ. ಈ ಜಿಲ್ಲೆಯ ನೀರಾವರಿ, ಕೈಗಾರಿಕೋದ್ಯಮ, ಕೃಷಿ ಅಭಿವೃದ್ಧಿಗೆ ಸರಕಾರ ನೆರವು ನೀಡಲಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ಸರ್ಕಾರ ವಿಶೇಷ ಯೋಜನೆ ರೂಪಿಸಲಿದೆ ಎಂದರು.
ಸಚಿವರಾದ ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ, ಸಚಿವರಾದ ಮುರುಗೇಶ್ ನಿರಾಣಿ, ಭೈರತಿ ಬಸವರಾಜ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಹನುಮಂತ ನಿರಾಣಿ, ಶಾಸಕರಾದ ಅನಿಲ್ ಬೆನಕೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಮತ್ತಿತರರು ಇದ್ದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement