ಚಿತ್ರದುರ್ಗ ಮುರುಘಾಮಠದ ಟ್ರಸ್ಟ್‌-ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದೆ. ನಿವೃತ್ತ ಐಎಎಸ್‌ (IAS) ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು ಚಿತ್ರದುರ್ಗ ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಇಂದು (ಡಿಸೆಂಬರ್ 13) ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ಮುರುಘಾಮಠದ ಮುರುಘಾ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಮುರುಘಾಮಠದ ಟ್ರಸ್ಟ್‌ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರನ್ನು ನೇಮಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರವು ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯ ಕೇಳಿತ್ತು. ಈಗ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಟ್ರಸ್ಟಿನ ಸ್ವತ್ತನ್ನು ರಕ್ಷಿಸುವ ಉದ್ದೇಶದಿಂದ ಸಂವಿಧಾನದ ಅನುಚ್ಛೇದ 162ರ ಅನ್ವಯ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಬಹುದು ಎಂದು ಅವರು ಅಭಿಪ್ರಾಯ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಟ್ರಸ್ಟ್‌ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement