ಒಳಾಂಗಣ, ಹವಾನಿಯಂತ್ರಿತ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸೂಚನೆ, ಐಎಲ್‌ಐ, ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್‌ ಪರೀಕ್ಷೆ: ಡಾ.ಕೆ.ಸುಧಾಕರ

ಬೆಳಗಾವಿ: ಬೇರೆ ದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ (ILI & SARI) ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ಕೋವಿಡ್‌ ನಿರ್ವಹಣೆ ಕುರಿತ ಸಭೆ ಬಳಿಕ ಮಾತನಾಡಿದ ಅವರು, ಚೀನಾ ಸೇರಿದಂತೆ ಬೇರೆ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಈಗಾಗಲೇ ದಿನಕ್ಕೆ 2-3 ಸಾವಿರ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಇದರ ಜೊತೆಗೆ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಒಳಾಂಗಣ ಸ್ಥಳ, ಹವಾನಿಯಂತ್ರಣ (ಎಸಿ) ಇರುವ ಕಡೆಗಳಲ್ಲಿ ಮಾಸ್ಕ್‌ ಧರಿಸಬೇಕು ಎಂದು ಸೂಚನೆ ನೀಡಲಾಗುವುದು. ಆತಂಕ ಪಡುವ ಅಗತ್ಯ ಇಲ್ಲ. ಆದರೆ ಮಾಸ್ಕ್‌ ಧರಿಸುವುದರಿಂದ ಸರಳವಾಗಿ ಕೋವಿಡ್‌ ಬರುವುದನ್ನು ತಡೆಗಟ್ಟಬಹುದು ಎಂದರು. ವಿದೇಶದಿಂದ ವಿಮಾನ ನಿಲ್ದಾಣದ ಮೂಲಕ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು ಎಂದು ತಿಳಿಸಿದರು.
ಅನೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಘಟಕಗಳನ್ನು ಅಳವಡಿಸಲಾಗಿದೆ. ಇವುಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಸಿದ್ಧತೆ ಮಾಡಿ ಇಟ್ಟುಕೊಳ್ಳಲು ಸೂಚಿಸಲಾಗುವುದು. ಜಿಲ್ಲಾಸ್ಪತ್ರೆಗಳಲ್ಲಿ ಕೆಲ ಹಾಸಿಗೆಗಳನ್ನು ಕೋವಿಡ್‌ಗೆ ಮೀಸಲಿಡಲು ನಿರ್ಧಾರ ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಯಲ್ಲೂ ಹಾಸಿಗೆ ಮೀಸಲಿಡಲು ಸೂಚಿಸಲಾಗುವುದು, ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಭೆ ನಡೆಯುತ್ತಿದ್ದು, ಅಲ್ಲಿಂದ ನೀಡುವ ಮಾರ್ಗಸೂಚಿಯನ್ನು ನೋಡಿಕೊಂಡು ರಾಜ್ಯದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.
ಅಲ್ಲದೆ, ಮೂರನೇ ಡೋಸ್ ಲಸಿಕಾಕರಣಕ್ಕೆ ವಿಶೇಷ ಒತ್ತು ನೀಡಬೇಕು ಎಂದು ತೀರ್ಮಾನಿಸಲಾಗಿದೆ. ಕೋವಿಡ್ ಕಡಿಮೆಯಾದ ನಂತರ ಮೂರನೇ ಡೋಸ್ ಹಾಕಿಸಿಕೊಳ್ಳುವುದು ಕಡಿಮೆಯಾಗಿತ್ತು. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲಿ 3ನೇ ಡೋಸ್ ಲಸಿಕೆ ಪಡೆಯಲು ವಿಶೇಷ ಕ್ಯಾಂಪ್ ಮಾಡಿ, ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ಜನರು ಮೂರನೇ ಡೋಸ್ ಅನ್ನು ಶೀಘ್ರ ತೆಗೆದುಕೊಳ್ಳಬೇಕು. ಕೋವಿಡ್ ಬಗ್ಗೆ ಇರುವ ಉದಾಸೀನತೆ ಬಿಡಬೇಕು. 3ನೇ ಡೋಸ್ ಲಸಿಕೆಯಿಂದ ಯಾವುದೇ ಅಪಾಯವಿಲ್ಲ. ಮೂರನೇ ಡೋಸ್ ಲಸಿಕೆ ಪಡೆಯುವಂತೆ ಅವರು ಮನವಿ ಮಾಡಿದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement