ಫಾರ್ಮಾ ಕಂಪನಿ ಲ್ಯಾಬ್‌ನಲ್ಲಿ ಬೆಂಕಿ ಅನಾಹುತ : 4 ಮಂದಿ ಸಾವು, ಒಬ್ಬರಿಗೆ ಗಾಯ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಅನಕಾಪಲ್ಲಿಯಲ್ಲಿರುವ ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸೋಮವಾರ ತಡರಾತ್ರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾರ, ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಿರ್ವಹಣಾ ಕಾಮಗಾರಿ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ರಾಜ್ಯ ಕೈಗಾರಿಕಾ ಸಚಿವ ಅಮರನಾಥ ತಿಳಿಸಿದ್ದಾರೆ. ಘಟನೆಯ ಕುರಿತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಚಿವರು ಮಾಹಿತಿ ನೀಡಿದ್ದಾರೆ.
ಮೃತ ಕಾರ್ಮಿಕರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಎಂದು ಅಮರನಾಥ ಮಾಹಿತಿ ನೀಡಿದರು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಕಾರ್ಮಿಕನಿಗೆ ವೈದ್ಯಕೀಯ ನೆರವು ನೀಡುವಂತೆ ಅಮರನಾಥ ವೈದ್ಯಕೀಯ ಅಧಿಕಾರಿಗಳಿಗೆ ಸೂಚಿಸಿದರು. ಅಪಘಾತದ ಕಾರಣವನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣವೇನೆಂಬುದರ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement