ಕಡಬ: ಕಾಡಾನೆ ದಾಳಿಗೆ ಯುವತಿ ಸೇರಿ ಇಬ್ಬರು ಸಾವು

ಮಂಗಳೂರು: ಇಂದು, ಸೋಮವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಯಿಂದ ಯುವತಿ ಸೇರಿ ಇಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರೆಂಜಿಲಾಡಿ ಗ್ರಾಮದ ಬಳಿ ನೈಲ ಎಂಬಲ್ಲಿ ನಡೆದ ವರದಿಯಾಗಿದೆ.
ಇಂದು, ಸೋಮವಾರ ಬೆಳಿಗ್ಗೆ 6:30ರ ಸುಮಾರಿಗೆ ಕಾಡಾನೆ ದಾಳಿ ನಡೆಸಿದೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೋಮವಾರ ಮನೆಯಿಂದ ಹಾಲು ಡೈರಿಗೆ ತೆರಳುತ್ತಿದ್ದರು. ಈ ವೇಳೆ ನೈಲ ಎಂಬಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ಯುವತಿ ಮೇಲೆ ಒಮ್ಮೆಗೇ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ ಗಾಬರಿಗೊಂಡ ಯುವತಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾಳೆ, ಯುವತಿಯ ಕೂಗು ಕೇಳೆ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರು ಸ್ಥಳಕ್ಕೆ ಓಡಿ ಬಂದಿದ್ದಾರೆ. ಯುವತಿಯ ಸಹಾಯಕ್ಕೆ ಬಂದ ರಮೇಶ್‌ ರೈ ಅವರ ಮೇಲೆ ಕೂಡ ಕಾಡಾನೆ ದಾಳಿ ನಡೆಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ತಕ್ಷಣವೇ ಸ್ಥಳೀಯ ನೆಲ್ಯಾಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸುತ್ತಮುತ್ತಲಿನ ಪರಿಸರದಲ್ಲಿ ಪದೇಪದೇ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ಆದರೆ ಈವರೆಗೆ ಮಾನವರ ಮೇಲೆ ದಾಳಿ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ದಾಳಿ ನಡೆಸಿದೆ. ಹೀಗಾಗಿ ಆತಂಕ ಮನೆ ಮಾಡಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಕಾಡಾನೆ ದಾಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕರಾವಳಿ ಭಾಗಕ್ಕೂ ಕಾಡಾನೆ ಕಾಟ ಆರಂಭವಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement