15000 ಶಾಲಾ ಶಿಕ್ಷಕರ ನೇಮಕಾತಿಗೆ 1:1 ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು, ಸೋಮವಾರ ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿಸಿ ನಾಗೇಶ ತಿಳಿಸಿದ್ದಾರೆ.
15 ಸಾವಿರ ಹುದ್ದೆಗೆ 13,351 ಮಂದಿ ಆಯ್ಕೆಯಾಗಿದ್ದಾರೆ.
ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕದ 5000 ಹುದ್ದೆಗಳಿಗೆ 4,194 ಅಭ್ಯರ್ಥಿಗಳು, ಇತರೆ ಜಿಲ್ಲೆಗಳ 10,000 ಹುದ್ದೆಗಳಿಗೆ 9,157 ಅಭ್ಯರ್ಥಿಗಳು ಸೇರಿದಂತೆ 13,351 ಮಂದಿಗಳು ಅರ್ಹತೆಯನ್ನು ಪಡೆದಿದ್ದಾರೆ.
ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿ ಮಾನ್ಯ ಮಾಡಿದ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ನಿರ್ದೇಶನ ನೀಡಿತ್ತು.

ನಂತರ ಮುಖ್ಯ ಕಾರ್ಯದರ್ಶಿ, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ ಪರಿಷ್ಕರಿಸಲು ತೀರ್ಮಾನಿಸಲಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ಸಚಿವ ಬಿ.ಸಿ.ನಾಗೇಶ ಮಾಹಿತಿ ನೀಡಿದ್ದಾರೆ.

ಇಂದು ಪ್ರಕಟಿಸಿದ ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ದಿನಾಂಕ 01-03-2023ರಿಂದ 04-03-2023ರ ವರೆಗೆ ಕಾಲಾವಕಾಶ ನೀಡಿದೆ. ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಯನ್ನು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರ ಅವರ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಖುದ್ಧಾಗಿ ಸಲ್ಲಿಸಬೇಕು. ದಿನಾಂಕ 04-03-2023ರ ನಂತರ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement