ದ್ವಿತೀಯ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಹುಬ್ಬಳ್ಳಿ : ಮಾರ್ಚ್ 9ರಿಂದ 29ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವರ ಬೇರೆ ವಿದ್ಯಾಸಂಸ್ಥೆಗಳ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯಬೇಕಾಗುವುದರಿಂದ ಶಿಕ್ಷಣ ಇಲಾಖೆಯ ಕೋರಿಕೆಯ ಮೇರೆಗೆ ಈ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement