ಪ್ರಧಾನಿ ಮೋದಿ ಮಂಡ್ಯ ಭೇಟಿಗೂ 2 ದಿನ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾದ ಸಂಸದೆ ಸುಮಲತಾ: ಬಿಜೆಪಿ ಸೇರ್ತಾರಾ..?

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪ ಬರುತ್ತಿರುವಾಗಲೇ ಮಂಡ್ಯ ಸಂಸದೆ ಸುಮಲತಾ ಅಂಬರೀಶ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭೇಟಿ ಮಾಡಿರುವುದು ರಾಜಕೀಯವಾಗಿ ಕುತೂಹಲಕ್ಕೆ ಕಾರಣವಾಗಿದೆ.
ಗುರುವಾರ ಸಂಜೆ ನಂತರ ಬೆಂಗಳೂರಿನ ವಸಂತನಗರದ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ ನಂತರ ಅವರು ಬಿಜೆಪಿ ಸೇರಲಿದ್ದಾರೆ ಎಂಬುದಕ್ಕೆ ಮತ್ತಷ್ಟು ರೆಕ್ಕೆಪುಕ್ಕ ಬಂದಿದೆ. ಇಂದು ಶುಕ್ರವಾರ ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಭಾರತೀಯ ಜನತಾ ಪಕ್ಷ ಸೇರುವ ನಿರ್ಧಾರವನ್ನು ಸುಮಲತಾ ಅಂಬರೀಶ ಪ್ರಕಟಿಸಬಹುದು ಎಂದು ಹೇಳಲಾಗುತ್ತಿದೆ.
ಈ ಊಹಾಪೋಹಗಳ ನಡುವೆಯೇ ಸಂಸದೆ ಇಂದು ಮಾರ್ಚ್ 10 ರಂದು ಮಧ್ಯಾಹ್ನ ಮಂಡ್ಯದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ.

ಸುಮಲತಾ ಶುಕ್ರವಾರ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ಗುರುವಾರ ಹೇಳಿದ್ದು, ಹೀಗಾಗಿ ಈ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ.
ಕೆಲ ದಿನಗಳ ಹಿಂದೆ ಸುಮಲತಾ ಅವರು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ್ದು ಬಿಜೆಪಿ ಸೇರುತ್ತಾರೆಂಬ ಊಹಾಪೋಹಕ್ಕೆ ಕಾರಣವಾಗಿತ್ತು. ಆದರೆ ಕೃಷ್ಣ ಅವರಿಗೆ ಪದ್ಮವಿಭೂಷಣ ಪುರಸ್ಕಾರ ಬಂದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿದ್ದೆ ಎಂದು ಸುಮಲತಾ ಹೇಳಿದ್ದರು.
ಮಾರ್ಚ್ 12 ರಂದು ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅರು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಕಾರ್ಯಕ್ರಮದ ಎರಡು ದಿನಗಳ ಮೊದಲು ಈ ಬೆಳವಣಿಗೆ ಕೂಡ ನಡೆದಿದೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement