ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್‌. ಧ್ರುವನಾರಾಯಣ ( (61)) ಹೃದಯಾಘಾತದಿಂದ ಶನಿವಾರ ಬೆಳಿಗ್ಗೆ ಮೈಸೂರಿನಲ್ಲಿ ನಿಧನರಾಗಿದ್ದಾರೆ.
ಆರ್.ಧ್ರುವನಾರಾಯಣ ಅವರಿಗೆ ಶನಿವಾರ (ಮಾರ್ಚ್‌ 11) ಬೆಳಗ್ಗೆ 6:30ರ ವೇಳೆಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರು ತಮ್ಮ ವೈದ್ಯರು ಹಾಗೂ ಕಾರು ಚಾಲಕನಿಗೆ ಕರೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಧ್ರುವನಾರಾಯಣ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಧ್ರುನಾರಾಯಣ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಧ್ರುವನಾರಾಯಣ ಅವರು ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹಗ್ಗವಾಡಿ ಗ್ರಾಮದಲ್ಲಿ ಜನಿಸಿದರು. ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1983ರಲ್ಲಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಸೇರಿದ್ದರು. 1984 ರಲ್ಲಿ, ಬೆಂಗಳೂರಿನ ಹೆಬ್ಬಾಳದ ಕೃಷಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು. ಬೆಂಗಳೂರು ನಗರದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರೂ ಆಗಿದ್ದರು. ನಂತರ 1986 ರಲ್ಲಿ ಕರ್ನಾಟಕ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದರು.
1999 ರಲ್ಲಿ, ವಿಧಾನಸಭಾ ಚುನಾವಣೆಯಲ್ಲಿ ಸಂತೇರಮರಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ನಂತರ ಕೊಳ್ಳೇಗಾಲ ಕ್ಷೇತ್ರದಿಂದ 1 ಬಾರಿ, ಸಂತೇಮರಹಳ್ಳಿ ಕ್ಷೇತ್ರದಿಂದ 1 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರುಇದಾದ ಬಳಿಕ ಚಾಮರಾಜನಗರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. 2014ರಲ್ಲಿ ಮತ್ತೊಮ್ಮೆ ಆಯ್ಕೆಯಾದರು. 2019ರಲ್ಲಿ, ಅವರು ಬಿಜೆಪಿಯ ಶ್ರೀನಿವಾಸ ಪ್ರಸಾದ ವಿರುದ್ಧ ಪರಾಭವಗೊಂಡರು.

ಧ್ರುವನಾರಾಯಣ ಅವರ ನಿಧನದ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು, ‘ನಗುಮುಖದ ಗೆಳೆಯ, ನ ಕಾಂಗ್ರೆಸ್‌ನ ಅತ್ಯಂತ ಸಮರ್ಪಿತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಧ್ರುವನಾರಾಯಣ ಅವರ ನಿಧನ ಸರಿಪಡಿಸಲಾಗದ ನಷ್ಟವನ್ನುಂಟು ಮಾಡಿದೆ. ಇದನ್ನು ವಿವರಿಸಲು ಯಾವುದೇ ಪದಗಳಿಲ್ಲ’ ಎಂದು ತಿಳಿಸಿದ್ದಾರೆ.
ಧ್ರುವ ನಾರಾಯಣ ಸಾವಿಗೆ ಕಂಬನಿ ಮಿಡಿದಿರುವ ಕೆಪಿಸಿಸಿ, ‘ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು,‌ ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವ ನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೊರಕಲಿ’ ಎಂದು ಹೇಳಿದೆ.

ಧ್ರುವ ನಾರಾಯಣ ಅವರ ಸಾವಿಗೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ನ ಹಿರಿಯ ಮುಖಂಡ ಆರ್. ಧ್ರುವನಾರಾಯಣ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತ ಮತ್ತು ದುಃಖವಾಗಿದೆ. ಇವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತೆಗೆ ಈ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್‌ ಮಾಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ನನ್ನ ಆತ್ಮೀಯ ಮತ್ತು ಮಾಜಿ ಸಂಸದ ಆರ್.ನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ’ ಎಂದು ಹೇಳಿದ್ದಾರೆ.
ಜನಪ್ರಿಯ ನಾಯಕರು, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರು ಇಂದು ಹಠಾತ್ ನಿಧನರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಒಬ್ಬ ಸಕ್ರಿಯ ರಾಜಕಾರಣಿಯನ್ನು ನಾಡು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement