ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌..: ಆಂಧ್ರದ ಮಾಜಿ ಸಿಎಂ ಕಿರಣಕುಮಾರ ರೆಡ್ಡಿ ಕಾಂಗ್ರೆಸ್‌ಗೆ ರಾಜೀನಾಮೆ

ಹೈದರಾಬಾದ್‌: ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿಣಕುಮಾರ ರೆಡ್ಡಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಕಿರಣಕುಮಾರ ರೆಡ್ಡಿ ಅವರು, “ದಯವಿಟ್ಟು ಈ ಪತ್ರವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆ ಪತ್ರವಾಗಿ ಸ್ವೀಕರಿಸಿ ಎಂದು ಬರೆದಿದ್ದಾರೆ.
ಆಂಧ್ರದ ಮಾಜಿ ಮುಖ್ಯಮಂತ್ರಿ ಕೂಡ ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆಯಿಂದ ಅಂತರ ಕಾಯ್ದುಕೊಂಡಿದ್ದರು ಎನ್ನಲಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ಕಿರಣಕುಮಾರ ರೆಡ್ಡಿ ರಾಜೀನಾಮೆ ನೀಡಿದ್ದು, ಅವರು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಮತ್ತು ಕೇಸರಿ ಪಕ್ಷದ ತೆಲಂಗಾಣ ಘಟಕವನ್ನು ಸೇರುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ದಟ್ಟವಾಗಿದೆ.
ರೆಡ್ಡಿ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ಮಾಣಿಕ್ಕಂ ಠಾಗೋರ್, ಪಕ್ಷದಿಂದ ಎಲ್ಲವನ್ನೂ ಪಡೆದುಕೊಂಡು ಆಂಧ್ರಪ್ರದೇಶ ಕಾಂಗ್ರೆಸ್ ಅನ್ನು ಮುಗಿಸಿ ಈಗ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಿರಣಕುಮಾರ ರೆಡ್ಡಿ ಅವರು ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದರು. ಅವರು ಆಂಧ್ರ ಪ್ರದೇಶದ ವಿಭಜನೆಯನ್ನು ತೀವ್ರವಾಗಿ ವಿರೋಧಿಸಿದ್ದರು ಮತ್ತು 2014 ರಲ್ಲಿ ಆಂಧ್ರಪ್ರದೇಶವನ್ನು ವಿಭಜಿಸಿ ತೆಲಂಗಾಣ ರಾಜ್ಯ ರಚನೆ ಮಾಡಿದ ಅಂದಿನ ಯುಪಿಎ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್‌ಗೆ ರಾಜೀನಾಮೆ ಸಹ ನೀಡಿದ್ದರು.
ಕಿರಣಕುಮಾರ ರೆಡ್ಡಿ ತಮ್ಮದೇ ಆದ ‘ಜೈ ಸಮೈಕ್ಯಂಧ್ರ’ ಪಕ್ಷವನ್ನು ಸ್ಥಾಪಿಸಿದರು ಮತ್ತು 2014 ರ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕೂಡ ಕಣಕ್ಕಿಳಿಸಿದರು. ಆದಾಗ್ಯೂ, ರೆಡ್ಡಿ ಅವರು 2018 ರಲ್ಲಿ ಮತ್ತೆ ಕಾಂಗ್ರೆಸ್‌ಗೆ ಸೇರಿದರು.

ಪ್ರಮುಖ ಸುದ್ದಿ :-   ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement