ಕೊಡವ ಅಭಿವೃದ್ಧಿ ನಿಗಮ-ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಕೊಡವ ಅಭಿವೃದ್ಧಿ ನಿಗಮ ಮತ್ತು ನೇಕಾರ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ ಆದೇಶ ಹೊರಡಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕೃತ ಟ್ವೀಟರ್ ಮತ್ತು ಫೇಸ್ ಬುಕ್ ಅಕೌಂಟ್ ಗಳಲ್ಲಿ ಅದೇಶದ ಪ್ರತಿಗಳನ್ನು ಪ್ರಕಟಿಸಿದ್ದಾರೆ. ಈ ಎರಡು ನಿಗಮಗಳನ್ನು ಸ್ಥಾಪಿಸುವುದಾಗಿ ಈ ಹಿಂದೆಯೇ ಭರವಸೆ ನೀಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಚುನಾವಣೆ ಘೋಷಣೆಯಾಗುವ ಮೊದಲೇ ನಿಗಮ ಸ್ಥಾಪಿಸಿ ಭರವಸೆ ಈಡೇರಿಸಿದ್ದಾರೆ.
ವಿಶಿಷ್ಟವಾದ ಸಂಸ್ಕೃತಿ, ಆಚಾರ-ವಿಚಾರ,ಆಹಾರ ಪದ್ಧತಿಯನ್ನು ಹೊಂದಿರುವ ರಾಜ್ಯದ ಕೊಡವ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ.ಈ ನಿಗಮವು ಕೊಡವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡಲಿದ್ದು, ಕೊಡವ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಬದ್ಧವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಕೊಡಗು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಕೊಡವ ಸಂಘಟನೆಗಳ ಪ್ರಮುಖರು ಸರ್ಕಾರವನ್ನು ಆಗ್ರಹಿಸಿದ್ದರು.

ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಆದೇಶ
ಹಿಂದುಳಿದ ವರ್ಗಗಳ ಪ್ರವರ್ಗ 2ಎ ಪಟ್ಟಿಯಲ್ಲಿರುವ ನೇಕಾರ ಸಮುದಾಯದ 38 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ನೇಕಾರರ ಅಭಿವೃದ್ಧಿ ನಿಗಮ ರಚನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಈ ಬಗ್ಗೆಯೂ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು, ರಾಜ್ಯದ ನೇಕಾರ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ನೇಕಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಲಾಗಿದೆ.ಈ ನಿಗಮವು ನೇಕಾರ, ತೊಗಟವೀರ, ಪದ್ಮಸಾಲಿ, ಕುರುಹಿನಶೆಟ್ಟಿ ಸೇರಿದಂತೆ ಇತರ ನೇಕಾರ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. ನೇಕಾರ ಅಭಿವೃದ್ಧಿ ನಿಗಮ ಸ್ಥಾಪಿಸವಂತೆ ಒತ್ತಾಯಗಳಿದ್ದವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇಕಾರರ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಬಗ್ಗೆ ತೀರ್ಮಾನಿಸಲಾಗುವುದು ಹಾಗೂ ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement