ಪಂಚಮಸಾಲಿ ಮೀಸಲಾತಿ ವಿಚಾರ; ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು, ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.
ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲು ಕಲ್ಪಿಸುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿ ಡಿ ಜಿ ರಾಘವೇಂದ್ರ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿದೆ.
ರಾಜ್ಯ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರವು ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನೀಡಿರುವ ಮಧ್ಯಂತರ ವರದಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಕುರಿತು ನ್ಯಾಯಾಲಯ ನೀಡುವ ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ ಎಂದು ಪೀಠವು ತಿಳಿಸಿದೆ.

ಪ್ರಮುಖ ಸುದ್ದಿ :-   ಅತ್ಯಾಚಾರ ಆರೋಪ: ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್

ಹೀಗಾಗಿ, ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಡಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ಪ್ರವರ್ಗ 2ಸಿ ಮೀಸಲು ಕಲ್ಪಿಸುವ ಸಂಬಂಧ ಕಳೆದ ಚಳಿಗಾಲದ ಅಧಿವೇಶನದಲ್ಲಿ ಕೈಗೊಂಡಿದ್ದ ನಿರ್ಧಾರಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲು ಸರ್ಕಾರಕ್ಕಿದ್ದ ಅಡ್ಡಿ ನಿವಾರಣೆಯಾದಂತಾಗಿದೆ.
ಇದಕ್ಕೂ ಮುನ್ನ ರಾಜ್ಯ ಸರ್ಕಾರದ ಪರ ವಕೀಲೆ ಪ್ರತಿಮಾ ಹೊನ್ನಾಪುರ ಹಾಗೂ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಧ್ಯಂತರ ಆದೇಶ ತೆರವುಗೊಳಿಸುವಂತೆ ಪೀಠಕ್ಕೆ ಮನವಿ ಮಾಡಿದರು. 2ಎ ಮೀಸಲಾತಿಗೆ ತೊಂದರೆಯಾಗುವಂತಹ ಯಾವುದೇ ಕೆಲಸವನ್ನು ರಾಜ್ಯ ಸರ್ಕಾರ ಮಾಡುವುದಿಲ್ಲ. ಪ್ರವರ್ಗ 2ಎಗೆ ಲಭ್ಯವಿರುವ ಮೀಸಲಾತಿಯನ್ನು ಅಡ್ಡಿಪಡಿಸುವ ಯಾವುದೇ ಉದ್ದೇಶವನ್ನೂ ಸರ್ಕಾರ ಹೊಂದಿಲ್ಲ. ಪ್ರಕರಣದಲ್ಲಿ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರದಿಂದ ಪ್ರವರ್ಗ 2ಎ ಅಡಿಯಲ್ಲಿನ ಮೀಸಲಾತಿಯ ಪ್ರಮಾಣ ಬದಲಾಗುವುದಿಲ್ಲ ಎಂದು ಭರವಸೆ ನೀಡಿ, ಈ ಕುರಿತು ನ್ಯಾಯಾಲಯಕ್ಕೆ ಲಿಖಿತ ಮುಚ್ಚಳಿಕೆ ಸಲ್ಲಿಸಿದರು.
ಅದನ್ನು ಪರಿಗಣಿಸಿದ ಪೀಠವು ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ನಿರ್ದೇಶಿಸಿ ಜನವರಿ 12ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿತು.

ಪ್ರಮುಖ ಸುದ್ದಿ :-   ಅತ್ಯಾಚಾರ ಆರೋಪ: ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement