ಒಳಮೀಸಲು ವಿರೋಧಿಸಿ ಪ್ರತಿಭಟನೆ: ಶಿಕಾರಿಪುರದಲ್ಲಿ ಯಡಿಯೂರಪ್ಪ ಮನೆಯ ಮೇಲೆ ಕಲ್ಲು ತೂರಾಟ, ಲಾಠಿ ಚಾರ್ಜ್

ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಇಂದು ಸೋಮವಾರ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮನೆಯ ಮುಂದೆ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಯಡಿಯೂರಪ್ಪ ಅವರ ಮನೆಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ನಿಗದಿಪಡಿಸಿ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಪರಿಶಿಷ್ಟ ಜಾತಿಗೆ ಶೇ 17ರಷ್ಟು ಮೀಸಲಾತಿಯಲ್ಲಿ ಶೇ 6ರಷ್ಟು ಪರಿಶಿಷ್ಟ ಜಾತಿಗೆ (ಎಡ), ಶೇ 5.5ರಷ್ಟು ಪರಿಶಿಷ್ಟ ಜಾತಿಗೆ (ಬಲ), ಶೇ 4.5ರಷ್ಟು ‘ಸ್ಪೃಶ್ಯರಿಗೆ’ ಮತ್ತು ಇತರರಿಗೆ ಶೇ 1ರಷ್ಟು ಮೀಸಲಾತಿ ನೀಡುವಂತೆ ಶಿಫಾರಸು ಮಾಡಿದೆ. ಈ ಒಳ ಮೀಸಲಾತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬಂಜಾರ, ಭೋವಿ ಮತ್ತು ಇತರೆ ಸಮಾಜದವರಿಂದ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪಟ್ಟಣದಲ್ಲಿ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರ ಫ್ಲೆಕ್ಸ್ ಗಳು, ಬ್ಯಾನರ್ ಗಳನ್ನು ಹರಿದು ಹಾಕಿದರು. ಟೈರ್, ಸೀರೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಇದೇ ವೇಳೆ ಪೊಲೀಸರ ಮೇಲೂ ಕಲ್ಲು ತೂರಿದ್ದು, ನಂತರ ಪೊಲೀಸರು ಲಾಠೀ ಚಾರ್ಜ್‌ ನಡೆಸಿ ಜನರನ್ನು ಚದುರಿಸಿದ್ದಾರೆ. ಗಲಾಟೆ ತೀವ್ರಗೊಳ್ಳುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುತ್ತಿದೆ.
ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು‌.

ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಮೂರು ಕಡೆ ಬಂದ್ ಮಾಡಿದ್ದರೂ, ಜನರು ಮನೆಯತ್ತ ನುಗ್ಗಿದರು. ಯಡಿಯೂರಪ್ಪ ಅವರು ಇತ್ತೀಚೆಗಷ್ಟೆ ಕಟ್ಟಿದ ಹೊಸ ಮನೆಯ ಗಾಜುಗಳ ಮೇಲೆ ಕಲ್ಲು ತೂರಿದ್ದು, ಗಾಜುಗಳು ಪುಡಿಯಾಗಿವೆ. ಕಲ್ಲು ತೂರಾಟದಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದು ಪ್ರತಿಭಟನಾ ನಿರತ ಮಹಿಳೆಯರಿಗೂ ಕಲ್ಲುಗಳು ಬಿದ್ದು ಗಾಯಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು‌. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಶಿಕಾರಿಪುರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಎನ್ನಲಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ.

.

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement