ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ ; ಮತ್ತೆ ಬಂಧನದ ಭೀತಿ

ಬೆಂಗಳೂರು: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಕೆ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.
ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಮಾರ್ಚ್‌ 17ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ ನಟರಾಜನ್‌ ನೇತೃತ್ವದ ಏಕಸದಸ್ಯ ಪೀಠವು ಇಂದು, ಸೋಮವಾಋ ಪ್ರಕಟಿಸಿದೆ. ವಿಸ್ತೃತ ಆದೇಶವು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಮಾರ್ಚ್‌ 7ರಂದು ಮಾಡಾಳು ವಿರೂಪಾಕ್ಷಪ್ಪ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಐದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್‌ ಸಲ್ಲಿಸಬೇಕು ಹಾಗೂ ಆದೇಶವಾದ 48 ಗಂಟೆಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತ್ತು. ನಂತರ ಮಾರ್ಚ್‌ 17ರಂದು ವಾದ-ಪ್ರತಿ ವಾದ ಆಲಿಸಿದ್ದ ನ್ಯಾಯಾಲಯವು ಆದೇಶ ಕಾಯ್ದಿರಿಸಿತ್ತು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಲಂಚ ಪ್ರಕರಣದಲ್ಲಿ ಮಾಡಾಳು ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ ಮಾಡಾಳು ವಿರುದ್ಧ ಭ್ರಷ್ಟಚಾರ ನಿಯಂತ್ರಣ ಕಾಯಿದೆ ಸೆಕ್ಷನ್‌ 7(ಎ), 7ಬಿ ಅಡಿ ಪ್ರಕರಣ ದಾಖಲಿಸಲಾಗಿದ್ದು, ಇದರಲ್ಲಿ ಶಾಸಕ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿ, ಪುತ್ರ ಪ್ರಶಾಂತ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ. ಅಲ್ಲದೇ, ಇತರ ಮೂವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.
ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳು ಕುಮಾರ ಪಾರ್ಕ್‌ನ ಕ್ರೆಸೆಂಟ್‌ ರಸ್ತೆಯಲ್ಲಿರುವ ಖಾಸಗಿ ಕಚೇರಿಯಲ್ಲಿ ₹40 ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು. ಆ ಮೇಲೆ ಲೋಕಾಯುಕ್ತ ಪೊಲೀಸರು ಪ್ರಶಾಂತ ಸೇರಿ ಐವರನ್ನು ಬಂಧಿಸಿದ್ದರು. ನಂತರ ಮಾಡಾಳು ವಿರೂಪಾಕ್ಷಪ್ಪ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement