ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಪೊಲೀಸ್‌ ಕಸ್ಟಡಿ ಶನಿವಾರ ಅಂತ್ಯವಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅಲ್ಲದೆ, ವಿರೂಪಾಕ್ಷಪ್ಪ ಅವರ ಪರವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ.
ಐದು ದಿನಗಳ ಲೋಕಾಯುಕ್ತ ಪೊಲೀಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರನ್ನು ಏಪ್ರಿಲ್‌ 11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ವಿರೂಪಾಕ್ಷಪ್ಪ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ ನಂತರ ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿ, ವಿಚಾರಣೆಯನ್ನು ನ್ಯಾಯಾಲಯವು ಏಪ್ರಿಲ್ 6ಕ್ಕೆ ಮುಂದೂಡಿತು.
ಮಾರ್ಚ್‌ 28ರಂದು ವಿರೂಪಾಕ್ಷಪ್ಪ ಅವರನ್ನು ಐದು ದಿನಗಳ ಲೋಕಾಯುಕ್ತ ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯವು ನೀಡಿತ್ತು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್‌ಡಿಎಲ್) ಕಚ್ಚಾ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲ ಆರೋಪಿಯಾಗಿದ್ದು, ಅವರ ಪುತ್ರ ಎರಡನೇ ಆರೋಪಿಯಾಗಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement