ಕರ್ನಾಟಕ ವಿಧಾನಸಭೆ ಚುನಾವಣೆ 2023: ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿಯ ರಣತಂತ್ರಗಳೇನು…?

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಾನು ಅಧಿಕಾರದಲ್ಲಿರುವ ದಕ್ಷಿಣ ಭಾರತದ ಏಕೈಕ ರಾಜ್ಯವನ್ನು ಉಳಿಸಿಕೊಳ್ಳಲು ಬಿಜೆಪಿ ಸರ್ವ ಪ್ರಯತ್ನವನ್ನೂ ಮಾಡುತ್ತಿದೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ ಮೊದಲ ವಾರದಲ್ಲಿ ಚುನಾವಣಾ ಕಾರ್ಯತಂತ್ರವನ್ನು ರೂಪಿಸಲು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ ಎಂದು ವರದಿಯಾಗಿದೆ.
ಈ ವಾರದ ಕೊನೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದ್ದು, ಕರ್ನಾಟಕದ ವಿಧಾನಸಭೆ ಚುನಾವಣೆಗೆ ನೆರೆಯ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ಪ್ರಮುಖ ನಾಯಕರನ್ನು ಚುನಾವಣಾ ಪ್ರಚಾರಕ್ಕೆ ನಿಯೋಜಿಸಲು ಬಿಜೆಪಿ ಯೋಜಿಸುತ್ತಿದೆ ಎಂದು ವರದಿಯಾಗಿದೆ.

ಬಿಜೆಪಿಯ ತಂತ್ರವೇನು?
ಕರ್ನಾಟಕದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿಯು ತನ್ನ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಕನಿಷ್ಠ 40-ಸ್ಟಾರ್ ಪ್ರಚಾರಕರನ್ನು ನಿಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 40 ಸ್ಟಾರ್ ಪ್ರಚಾರಕರಲ್ಲಿ ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮತ್ತು ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ನಿರ್ಮಲಾ ಸೀತಾರಾಮನ್ ಮುಂತಾದ ಹಲವಾರು ನಾಯಕರು ಹಾಗೂ ಕೇಂದ್ರ ಸಚಿವರು ಇದ್ದಾರೆ ಹಾಗೂ ಇವರಿಗೆ ಕರ್ನಾಟಕ ಚುನಾವಣೆಗಾಗಿ ಎರಡು ವಾರಗಳ ಸಮಯ ನೀಡುವಂತೆ ಕೇಳಲಾಗಿದೆ ಎನ್ನಲಾಗಿದೆ.
ಕರ್ನಾಟಕದ ಹಾಲಿ ವಿಧಾನಸಭೆಯಲ್ಲಿ ಬಿಜೆಪಿ ಈಗ 119 ಶಾಸಕರನ್ನು ಹೊಂದಿದೆ, ಆದಾಗ್ಯೂ, ಈ ಚುನಾವಣೆಯಲ್ಲಿ, ಹಾಲಿ ಶಾಸಕರ 25- 35% ಸ್ಥಾನಗಳನ್ನು ಬದಲಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದ ಬಿಜೆಪಿ ಸರ್ಕಾರದ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಲಾಭದ ಬಗ್ಗೆ ಜನರಿಗೆ ಪ್ರಚಾರ ಮಾಡುವುದರ ಜೊತೆಗೆ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಯಾಕೆ ಇರಬೇಕು ಎಂಬುದರ ಬಗ್ಗೆಯೂ ಪ್ರಚಾರ ಮಾಡಲಿದೆ. ಬಿಜೆಪಿಯ ಅತಿದೊಡ್ಡ ಸ್ಟಾರ್ ಪ್ರಚಾರಕ ಪ್ರಧಾನಿ ಮೋದಿ ಅವರ ಚುನಾವಣಾ ಪ್ರವಾಸವು ಏಪ್ರಿಲ್ 8 ರಿಂದ 10ರ ವರೆಗೆ ನಡೆಯಲಿದ್ದು, ಅವರು ಮೈಸೂರಿನ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕದಲ್ಲಿ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   70 ವರ್ಷ ಮೇಲ್ಪಟ್ಟ ಎಲ್ಲರಿಗೂ ₹5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ; ಮೋದಿ ಸರ್ಕಾರದ ಮಹತ್ವದ ನಿರ್ಧಾರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement