ಶಾಸಕ ನೆಹರು ಓಲೆಕಾರ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್‌ ತಡೆ; ಚುನಾವಣಾ ಹಾದಿ ಸುಗಮ

ಬೆಂಗಳೂರು: ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರು ಓಲೆಕಾರ ಅವರನ್ನು ದೋಷಿ ಎಂದು ತೀರ್ಮಾನಿಸಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಎರಡು ವರ್ಷಗಳ ಶಿಕ್ಷೆ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಓಲೆಕಾರ ಅವರನ್ನು ಸಲ್ಲಿಸಿದ್ದ ಮಧ್ಯಂತರ ವಿಚಾರಣೆ ನಡೆಸಿ, ಮಾರ್ಚ್‌ 31ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ. ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಬುಧವಾರ ಪ್ರಕಟಿಸಿತು.
ಹಾವೇರಿ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ಹಣ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನೆಹರು ಓಲೆಕಾರ, ಅವರ ಇಬ್ಬರು ಪುತ್ರರು ಮತ್ತು ಅಧಿಕಾರಿಗಳನ್ನು ದೋಷಿಗಳು ಎಂದು ತೀರ್ಮಾನಿಸಿ ತಲಾ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ಓಲೆಕಾರ್‌ ಅವರು ಫೆಬ್ರವರಿ 23ರಂದು ಹೈಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣಾಧೀನ ನ್ಯಾಯಾಲಯವು ಖಾಸಗಿ ದೂರನ್ನು ಪರಿಗಣಿಸುವ ಕಾನೂನು ಪಾಲಿಸಿಲ್ಲ ಎಂದು ಅವರು ವಾದಿಸಿದ್ದರು. ಇದನ್ನು ಪುರಸ್ಕರಿಸಿದ್ದ ಪೀಠವು ಮೊದಲಿಗೆ ಜೈಲು ಶಿಕ್ಷೆ ಆದೇಶವನ್ನು ಅಮಾನತ್ತಿನಲ್ಲಿರಿಸಿತ್ತು. ಇದರ ಆಧಾರದ ಮೇಲೆ ದೋಷಿ ಆದೇಶಕ್ಕೆ ತಡೆ ನೀಡುವಂತೆ ಕೋರಿ ಮತ್ತೊಂದು ಮಧ್ಯಂತರ ಅರ್ಜಿಯನ್ನು ದಾಖಲಿಸಲಾಗಿತ್ತು. ಈಗ ಅದನ್ನೂ ಹೈಕೋರ್ಟ್‌ ಮಾನ್ಯ ಮಾಡಿರುವುದರಿಂದ ಓಲೆಕಾರ್‌ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement