ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ : ಶಾಸಕ ಜಮೀರ್‌ ಅಹಮದ್ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ.
ಎಸಿಬಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿ ಜಮೀರ್ ಅಹಮದ್ ಖಾನ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ಮಾಡಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ ತಿಂಗಳಲ್ಲಿ ಅವರ ಮೇಲೆ ಎಫ್‌ಐಆರ್ ದಾಖಲಿಸಿತ್ತು. ಶಾಸಕರು ಆದಾಯ ಮೀರಿ 87 ಕೋಟಿ ರೂಪಾಯಿ ಹೆಚ್ಚುವರಿ ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ತಿಳಿಸಿತ್ತು.

ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದ ಜಮೀರ್ ಅಹಮದ್, ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದರು. ಅಲ್ಲದೆ, ಅರ್ಜಿ ಇತ್ಯರ್ಥವಾಗುವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಕಳೆದ ವರ್ಷ ಎಸಿಬಿ ರಚನೆಯನ್ನು ಹೈಕೋರ್ಟ್ ರದ್ದುಪಡಿಸಿದ್ದರಿಂದ ಎಸಿಬಿ ದಾಖಲಿಸಿದ ಪ್ರಕರಣಗಳನ್ನು ಈಗ ಲೋಕಾಯುಕ್ತ ಸಂಸ್ಥೆ ಮುಂದುವರಿಸುತ್ತಿದೆ.
ಅರ್ಜಿ ವಿಚಾರಣೆ ವೇಳೆ ಜಮೀರ್ ಪರ ವಕೀಲರು, ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಎಫ್‌ಐಆರ್ ದಾಖಲಿಸುವ ಮುನ್ನ ತನಿಖಾ ಸಂಸ್ಥೆ ಪ್ರಾಥಮಿಕ ವಿಚಾರಣೆ ನಡೆಸುವುದು ಕಡ್ಡಾಯವಾಗಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ಈ ಪ್ರಕರಣದಲ್ಲಿ ಎಸಿಬಿ ನೇರವಾಗಿ ಎಫ್‌ಐಆರ್ ದಾಖಲಿಸಿ, ತನಿಖೆ ಕೈಗೊಂಡಿದೆ. ಜಾರಿ ನಿರ್ದೇಶನಾಲಯ (ಇಡಿ) ವರದಿ ಆಧರಿಸಿ ಎಸಿಬಿ ಎಫ್‌ಐಆರ್ ದಾಖಲಿಸಿದೆ. ಇದು ಕಾನೂನು ಬಾಹಿರ ಕ್ರಮವಾಗಿದೆ. ಆದ್ದರಿಂದ, ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿದ್ದರು.
ಲೋಕಾಯುಕ್ತ ಪರ ವಕೀಲರು, ಅಕ್ರಮವಾಗಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸುವ ಅಗತ್ಯವೇನು ಇಲ್ಲ. ಹೀಗಾಗಿ, ಎಸಿಬಿಯು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮ ಕಾನೂನುಬದ್ಧವಾಗಿದ್ದು, ತಡೆ ನೀಡಬಾರದು ಎಂದು ವಾದಿಸಿದ್ದರು.

ಪ್ರಮುಖ ಸುದ್ದಿ :-   ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement