ಶಿರಸಿ: ರಾಜ್ಯ ವಿಧಾನಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ಬಂಡಾಯದ ಭೀತಿ ಎದುರಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೆಂಕಟೇಶ್ ಹೆಗಡೆ ಹೊಸಬಾಳೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿಯಾಗಿದ್ದೆ. ಆದರೆ ನಾಲ್ಕು ಸಲ ಸೋತ ಅಭ್ಯರ್ಥಿಯನ್ನು ಐದನೇ ಸಲ ಅಭ್ಯರ್ಥಿ ಮಾಡಿರುವುದು ಆಘಾತ ತಂದಿದೆ ಎಂದು ಭೀಮಣ್ಣ ನಾಯ್ಕ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2008-09ರಿಂದ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಹುದ್ದೆ ಕೇಳದೆ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇ 2000-05ರವರೆಗೆ ಜಿಲ್ಲಾ ಪಂಚಾಯತಕ್ಕೆ ಸ್ಪರ್ಧಿಸಿದ್ದೆ. 2004ರಲ್ಲಿ ಜೆಡಿಎಸ್‌ನಿಂದ ಅಂಕೋಲಾ ಕ್ಷೇತ್ರದಿಂದ ಸ್ಪರ್ಧಿಸಿ ಉತ್ತಮ ಮತಗಳನ್ನು ಪಡೆದಿದ್ದೆ. ಭೀಮಣ್ಣ ಅವರು ಕಳೆದ ಅನೇಕ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ನಿಂತಿದ್ದಾರೆ. ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಬೇರೆ ಯಾರೂ ಇಲ್ಲವೇ..? ಸೋತ ಅಭ್ಯರ್ಥಿಗೇ ಟಿಕೆಟ್ ನೀಡಲಗಿದೆ. ಹೊಸ ಮುಖಕ್ಕೆ ಟಿಕೆಟ್ ನೀಡಬೇಕು ಎನ್ನುವ ಜನಾಭಿಪ್ರಾಯವಿದ್ದರೂ ಕಡೆಗಣಿಸಲಾಗಿದೆ. ಬೇರೆ ಯಾವ ಆಕಾಂಕ್ಷಿಗಳಿಗಾದರೂ ಟಿಕೆಟ್ ನೀಡಬಹುದಿತ್ತು. ಆದರೆ ಸೋತವರಿಗೇ ಮತ್ತೆ ಮಣೆ ಹಾಕಲಾಗಿದೆ. ಹೀಗಾಗಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ