ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದರೆ ನಾನು ಅವರ ಜೊತೆ ಕೆಲಸ ಮಾಡಲು ಸಿದ್ಧ: ಡಿ.ಕೆ. ಶಿವಕುಮಾರ

ಬೆಂಗಳೂರು:‘ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರು, ಅವರೇ ನನ್ನ ಅಧ್ಯಕ್ಷರು. ಖರ್ಗೆ ಅವರು ನನಗಿಂತ 20 ವರ್ಷ ಹಿರಿಯರು. ಅವರ ಹಿರಿತನ, ತ್ಯಾಗಕ್ಕೆ ನಾವು ಗೌರವ ನೀಡಬೇಕು. ಒಂದು ವೇಳೆ ಅವರು ಮುಖ್ಯಮಂತ್ರಿಯಾದರೆ ಅವರ ಜೊತೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಜ್ಯ ಹಾಗೂ ದೇಶಕ್ಕೆ ಆಸ್ತಿ. ಪಕ್ಷ ಯಾವ ತೀರ್ಮಾನ ಮಾಡುತ್ತದೆಯೋ ನಾನು ಅದಕ್ಕೆ ಬದ್ಧವಾಗಿರುತ್ತೇನೆ. ಅವರು ಪಕ್ಷಕ್ಕಾಗಿ ಅನೇಕ ತ್ಯಾಗ ಮಾಡಿದ್ದಾರೆ. ಮಧ್ಯರಾತ್ರಿ ತಮ್ಮ ಶಾಸಕಾಂಗ ಪಕ್ಷದ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬ್ಲಾಕ್ ಅಧ್ಯಕ್ಷರ ಹುದ್ದೆಯಿಂದ ಇಂದು ಎಐಸಿಸಿ ಅಧ್ಯಕ್ಷ ಸ್ಥಾನದ ವರೆಗೆ ಏರಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಸಾಧ್ಯ. ಖರ್ಗೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಸಂತೋಷದಿಂದ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.
ಎಪ್ರಿಲ್‌ 16ರಂದು ಕೋಲಾರದಲ್ಲಿ ರಾಹುಲ್ ಗಾಂಧಿ ಅವರ ಜೈ ಭಾರತ ಸತ್ಯಾಗ್ರಹ ಯಾತ್ರೆ:
ರಾಹುಲ್ ಗಾಂಧಿ ಅವರಿಗೆ ಬಿಜೆಪಿಯವರು ಹೆದರಿ ಅವರ ಸಂಸತ್ತಿನ ಸದಸ್ಯತ್ವವನ್ನು ವಜಾಗೊಳಿಸಿದ್ದಾರೆ. ಒಂದು ಭಾಷಣದ ವಿಚಾರವಾಗಿ ಇದೇ ಮೊದಲ ಬಾರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ತೀರ್ಪು ಬಂದ 24 ಗಂಟೆಗಳಲ್ಲಿ ಅವರನ್ನು ಅನರ್ಹ ಮಾಡಲಾಗಿದೆ ಎಂದು ಹೇಳಿದರು.
ಯಾವುದೇ ಅರ್ಜಿ ಹಾಕದೇ, ನೋಟೀಸ್ ನೀಡದೇ, ಲೋಕಸಭೆ ಸ್ಪೀಕರ್ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು 7 ಲಕ್ಷಗಳ ಮತಗಳ ಅಂತರದಲ್ಲಿ ಗೆದ್ದ ನಾಯಕನ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಮಾನ. ರಾಜಕಾರಣ ನಿಂತ ನೀರಲ್ಲ. ಎಲ್ಲವೂ ಪುನರಾವರ್ತನೆಯಾಗಲಿದೆ ಎಂದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದ್ದರೋ ಅಲ್ಲಿಯೇ ಭಾಷಣ ಮಾಡಬೇಕು ಎಂದು ಹೇಳಿದಾಗ ನಾವು ಕೋಲಾರದಲ್ಲಿ ಜೈ ಭಾರತ ಸತ್ಯಾಗ್ರಹ ಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ. ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಒಂದು ವಾರಗಳ ಕಾಲ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದು, ಅದಕ್ಕೆ ರಾಹುಲ್ ಗಾಂಧಿ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ಜೈ ಭಾರತ ಸತ್ಯಾಗ್ರಹ ಯಾತ್ರೆಯನ್ನು ಎಪ್ರಿಲ್‌ 16ರಂದು ಆಯೋಜಿಸಲು ತೀರ್ಮಾನಿಸಿದ್ದೇವೆ. ಅದೇ ದಿನ ಕೆಪಿಸಿಸಿ ನೂತನ ಕಟ್ಟಡ ಉದ್ಘಾಟನೆ ಮಾಡಲಾಗುತ್ತದೆ ಎಂದರು.

ಕೆಪಿಸಿಸಿ ಪ್ರಚಾರ ಸಮಿತಿ ಸಹ ಅಧ್ಯಕ್ಷರಾಗಿ ಸುಧಾಮ ದಾಸ್ ನೇಮಕ
ಸುಧಾಮ ದಾಸ್ ಅವರು ಇಡಿ ಜಂಟಿ ಅಧಿಕಾರಿಯಾಗಿದ್ದರು. ಅವರು ಸಮಾಜದ ರಕ್ಷಣೆಗೆ ದೊಡ್ಡ ಬಳಗ ಕಟ್ಟಿಕೊಂಡು ಸಮುದಾಯ ರಕ್ಷಣೆ ಮಾಡುತ್ತಿದ್ದರು. ಾವರನ್ನು ಪಕ್ಷದಲ್ಲಿ ಬಳಸಿಕೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಸಹ ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತಿದೆ. ಎಂ.ಬಿ ಪಾಟೀಲ ಅವರು ಅಧ್ಯಕ್ಷರಾಗಿದ್ದರೂ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಹೆಚ್ಚಿನ ಒತ್ತಡ ಹಾಕಬಾರದು ಎಂದು ಸುಧಾಮ ದಾಸ್ ಅವರನ್ನು ನೇಮಕ ಮಾಡಲಾಗುತ್ತಿದೆ ಎಂದರು.
ಪಕ್ಷದಲ್ಲಿ ಟಿಕೆಟ್ ಅಸಮಾಧಾನದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ನಾವು ಎಲ್ಲರ ಜೊತೆ ಮಾತನಾಡುತ್ತಿದ್ದೇವೆ. ರಾಜಕಾರಣದಲ್ಲಿ ಆಸೆ ಸಹಜ. ಈ ಸಂದರ್ಭದಲ್ಲಿ ನಾವು ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ. ರಾಜಕೀಯ ಎಂದರೆ ಅಧಿಕಾರ ಹಂಚಿ ಸಹಕಾರ ನೀಡುವುದಾಗಿದೆ. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಧಿಕಾರವನ್ನು ಹಂಚಲಾಗುವುದು. ಈ ಕಾರಣಕ್ಕಾಗಿ ಎಲ್ಲರೂ ಸಮಾಧಾನವಾಗಿ ಇರಬೇಕು ಎಂದು ಕೇಳುತ್ತಿದ್ದೇವೆ. ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ಕೊಟ್ಟಾಗ ಅಸಮಾಧಾನ ಸಹಜ. ಪಕ್ಷದಲ್ಲಿ ಗೆಲುವಿನ ಸಾಮರ್ಥ್ಯ ಬಹಳ ಮುಖ್ಯ. ಆ ದೃಷ್ಟಿಯಿಂದ ನಾವು ಕೆಲವು ತೀರ್ಮಾನ ಕೈಗೊಂಡಿರುತ್ತೇವೆ ಎಂದರು.
ಬಿಜೆಪಿಯ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ವಿಶ್ವನಾಥ ಅವರು ಸೋಮವಾರ ಕಾಂಗ್ರೆಸ್ ಸೇರುತ್ತಿದ್ದಾರೆ. ವಿಶ್ವನಾಥ್ ಅವರು ಮೊನ್ನೆಯಷ್ಟೇ ಪಶ್ಚಾತಾಪ ಸತ್ಯಾಗ್ರಹ ಮಾಡಿದ್ದಾರೆ. ನಾವು ಕೆಲವರನ್ನು ಸಮಾಧಾನ ಪಡಿಸುತ್ತಿದ್ದೇವೆ’ ಎಂದರು.
ವರುಣಾ ಹಾಗೂ ಶಿಕಾರಿಪುರದಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ, ‘ಕುಮಾರಸ್ವಾಮಿ ಅವರಿಗೆ ನಮ್ಮ ಪಕ್ಷದ ಬಗ್ಗೆ ತಿಳಿದಿದೆಯಾ?’ ಎಂದು ಪ್ರಶ್ನಿಸಿದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement