ಸೂರತ್ : “ಮೋದಿ ಉಪನಾಮ” ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಮೇಲಿನ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಗುರುವಾರ ವಜಾಗೊಳಿಸಿದೆ. ಆ ಮೂಲಕ ರಾಹುಲ್ ಗಾಂಧಿ ಅವರಿಗೆ ಹಿನ್ನಡೆಯಾಗಿದ್ದು, ಅವರ ಲೋಕಸಭಾ ಸದಸ್ಯತ್ವದ ಅನರ್ಹತೆ ಮುಂದುವರಿಯಲಿದೆ.
2019ರ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ರಾಹುಲ್ ಗಾಂಧಿ ಅವರು, ತಮಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತು ಮಾಡಬೇಕು ಹಾಗೂ ಶಿಕ್ಷೆಗೆ ತಡೆ ನೀಡಬೇಕು ಎಂದು ಕೋರಿ ಸೂರತ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಕೋಲಾರದಲ್ಲಿ 2019ರಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು, “ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿಯೇ ಇರಲಿ, ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಉಪನಾಮವೇ ಏಕೆ ಇದೆ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು. ಅವರ ಹೇಳಿಕೆಯಿಂದ ಮೋದಿ ಸಮುದಾಯಕ್ಕೆ ಅವಮಾನವಾಗಿದೆ ಎಂದು ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ ಮೋದಿ ಅವರು ಸೂರತ್‌ನಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಗಾಂಧಿಯನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೇ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದು ಕ್ರಿಮಿನಲ್ ಮಾನಹಾನಿ ಪ್ರಕರಣವಾಗಿದ್ದರಿಂದ ಎರಡು ವರ್ಷ ಶಿಕ್ಷೆಗೆ ಒಳಗಾದರೆ ಅವರು ಸ್ವಯಂಚಾಲಿತವಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳ್ಳುತ್ತಾರೆ. ಅಂತೆಯೇ ತೀರ್ಪು ಪ್ರಕಟವಾದ ಬೆನ್ನಲ್ಲೇ ಲೋಕಸಭೆಯಿಂದ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿತ್ತು.
ನಂತರ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಏಪ್ರಿಲ್ 13ರಂದು ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಾಧೀಶ ರಾಬಿನ್ ಮೊಗೇರ ಅವರು ʼ ಶಿಕ್ಷೆಗೆ ತಡೆ ನೀಡಬೇಕೇ ಅಥವಾ ಬೇಡವೇ ಎಂಬ ವಿಷಯದ ಕುರಿತು ಎರಡೂ ಕಡೆಯ ಪಕ್ಷಕಾರರ ವಾದಗಳನ್ನು ಆಲಿಸಿದ ನಂತರ ತೀರ್ಪು ಕಾಯ್ದಿರಿಸಿದ್ದರು.
ಇಂದು ತೀರ್ಪು ಪ್ರಕಟಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಬಿನ್ ಮೊಗೇರ ಅವರು ರಾಹುಲ್ ಗಾಂಧಿಗೆ ನೀಡಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದರು. ಪರಿಣಾಮ ರಾಹುಲ್ ಅವರ ಲೋಕಸಭಾ ಸದಸ್ಯತ್ವ ಅನರ್ಹತೆ ಮುಂದುವರೆಯಲಿದೆ. ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ