ಬೆಂಗಳೂರು: ಶ್ಯಾಮಪ್ರಸಾದ ಶಾಸ್ತ್ರೀ ಆತ್ಮಹತ್ಯೆಗೀಡಾಗಲು ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.
ರಾಘವೇಶ್ವರ ಶ್ರೀಗಳ ವಿರುದ್ಧ ಹಲವು ಪ್ರಕರಣಗಳು ಮುನ್ನಲೆಗೆ ಬಂದ ಸಂದರ್ಭದಲ್ಲೇ ರಾಮಚಂದ್ರಾಪುರ ಮಠದ ಭಕ್ತ ಎಂದು ಹೇಳಲಾಗಿದ್ದು ಶ್ಯಾಮಪ್ರಸಾದ್ ಶಾಸ್ತ್ರಿ ಎಂಬವರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 2014ರ ಆಗಸ್ಟ್ 31ರಂದು ನಡೆದಿದ್ದ ಈ ಘಟನೆಗೆ ಪ್ರಕರಣವೊಂದರಲ್ಲಿ ರಾಘವೇಶ್ವರ ಸ್ವಾಮೀಜಿ ಪರ ವಹಿಸುವಂತೆ ಶ್ಯಾಮ್ ಪ್ರಸಾದ್ ಶಾಸ್ತ್ರಿ ಮೇಲೆ ಒತ್ತಡ ಹೇರಲಾಗಿತ್ತು ಎಂದು ಈ ಇಬ್ಬರ ವಿರುದ್ಧ ಆರೋಪ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಪುತ್ತೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಿಐಡಿ ತನಿಖಾಧಿಕಾರಿಗಳು ಸಲ್ಲಿಸಿದ್ದ ಈ ಆರೋಪ ಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ಕೋರಿ ರಾಘವೇಶ್ವರ ಸ್ವಾಮೀಜಿ ಮತ್ತು ಕಲ್ಲಡ್ಕ ಪ್ರಭಾಕರ ಭಟ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠವು ಮಾನ್ಯ ಮಾಡಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ರಾಘವೇಶ್ವರ ಸ್ವಾಮೀಜಿ ಅವರನ್ನು ಪ್ರತಿನಿಧಿಸಿದ್ದ ವಕೀಲ ಪಿ.ಎನ್. ಮನಮೋಹನ್ ಮತ್ತು ಕಲ್ಲಡ್ಕ ಪ್ರಭಾಕರ ಭಟ್ ಪ್ರತಿನಿಧಿಸಿದ್ದ ಹಿರಿಯ ವಕೀಲ ಪಿ.ಪಿ. ಹೆಗ್ಡೆ ಅವರು ಅರ್ಜಿದಾರರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ. ಶಾಮ್ ಪ್ರಸಾದ್ ಶಾಸ್ತ್ರಿ ಹತಾಶರಾಗಿ ಆತ್ಮಹತ್ಯೆಗೆ ಶರಣಾದಂತಿದೆ. ಅವರು ಬರೆದಿಟ್ಟಿದ್ದ ಮರಣ ಪತ್ರದಲ್ಲಿ ಅರ್ಜಿದಾರರ ಹೆಸರುಗಳ ಉಲ್ಲೇಖ ಇಲ್ಲ. ತನಿಖಾಧಿಕಾರಿಗಳು ಶಾಮಪ್ರಸಾದ ಶಾಸ್ತ್ರಿ ಮೃತಪಟ್ಟ ಒಂದು ತಿಂಗಳ ನಂತರ ಸುಳ್ಳು ಹೇಳಿಕೆ ತಯಾರಿಸಿ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಆಕ್ಷೇಪಿಸಿದ್ದರು. ವಾದಗಳನ್ನು ಆಲಿಸಿದ ನ್ಯಾಯಾಲಯವು ವಾದವನ್ನು ಆಲಿಸಿದ ಹೈಕೋರ್ಟ್ ಪೀಠ, ರಾಘವೇಶ್ವರ ಶ್ರೀಗಳ ಹಾಗೂ ಡಾ.ಪ್ರಭಾಕರ ಭಟ್ ವಿರುದ್ದದ ದೋಷಾರೋಪ ರದ್ದುಪಡಿಸಿತು.
ಪ್ರಕರಣದ ಹಿನ್ನೆಲೆ:
ಹೊಸನಗರ ಶ್ರೀ ರಾಮಚಂದ್ರಾಪುರ ಮಠದಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಶ್ಯಾಮಪ್ರಸಾದ ಶಾಸ್ತ್ರಿ 2014ರ ಆಗಸ್ಟ್ 31ರಂದು ಬಂದೂಕಿನಿಂದ ಗುಂಡು ಹಾರಿಸುಕೊಂಡು ಮೃತಪಟ್ಟಿದ್ದರು. ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಮೃತರ ಪತ್ನಿ ದೂರು ದಾಖಲಿಸಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನದಂದು ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಮಠದ ಮಂದಿ ತಮ್ಮ ಪತಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಆಗ ರಾಘವೇಶ್ವರ ಶ್ರೀಗಳ ವಿರುದ್ಧದ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನೀವು ಸ್ವಾಮೀಜಿ ಪರ ನಿಲ್ಲಬೇಕು ಎಂದು ಒತ್ತಡ ಹಾಕಿದ್ದರು ಎಂದು ಆರೋಪಿಸಿ ಶ್ಯಾಮ್ ಪ್ರಸಾದ್ ಶಾಸ್ತ್ರಿ ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಆಗಿನ ಸರ್ಕಾರ ಸಿಐಡಿಗೆ ವಹಿಸಿತ್ತು.
ಈ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ