
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಮೇ 8 ರಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ.
ರಾಜಕೀಯ ಪಕ್ಷಗಳು ಮೇ 8ರಂದು (ಸೋಮವಾರ) ಮಾತ್ರ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಅವಕಾಶವಿದ್ದು, ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ.
ಆ ಬಳಿಕ ಕ್ಷೇತ್ರಗಳಲ್ಲಿ ಆಯಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರೂ ಇರುವಂತಿಲ್ಲ. ಹೊರಗಡೆಯಿಂದ ಬಂದಿರುವ ಸ್ಟಾರ್ ಪ್ರಚಾರಕರು ಕ್ಷೇತ್ರಗಳನ್ನ ತೊರೆಯಬೇಕಾಗುತ್ತದೆ. ಆದರೆ ಮೇ 9 ರಂದು ಅಭ್ಯರ್ಥಿಗಳ ತಮ್ಮ ಕ್ಷೇತ್ರಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಬಹುದಾಗಿದೆ.
ಕಾಂಗ್ರೆಸ್, ಬಿಜೆಪಿ, ಹಾಗೂ ಎಎಪಿ ಪಕ್ಷಗಳು ತಮ್ಮ ರಾಷ್ಟ್ರೀಯ ನಾಯಕರನ್ನು ಕರೆಸಿ ದೊಡ್ಡ ದೊಡ್ಡ ರೋಡ್ ಶೋಗಳು ಹಾಗೂ ಸಾರ್ವಜನಿಕ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿವೆ. ಜೆಡಿಎಸ್‌ನಲ್ಲಿ ಮಾತ್ರ ಪ್ರಧಾನಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರೇ ಸ್ಟಾರ್ ಕ್ಯಾಂಪೇನರ್‌ಗಳಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್‌ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ವಿವಿಧೆಡೆಗಳಲ್ಲಿ ಮತಯಾಚನೆ ಮಾಡಿದರು.
ಮೇ 8 ಸಂಜೆ 6ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿಲ್ಲದವರು, ಸ್ಟಾರ್ ಪ್ರಚಾರಕರೂ ಕ್ಷೇತ್ರ ಬಿಟ್ಟು ತೆರಳಲು ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ. ಮತದಾನ ಮುಕ್ತಾಯದ 48 ಗಂಟೆಗೂ ಮೊದಲು ಬಹಿರಂಗ ಪ್ರಚಾರ ಅಂತ್ಯವಾಗಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ