ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ ಮಾಡಿದ ರಾಜ್ಯದ ನೂತನ ಸರ್ಕಾರ

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ. 4ರಷ್ಟು ಹೆಚ್ಚಿಸಿ ಆದೇಶಿಸಿದೆ.
ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರುಗಳಿಗೆ ಈ ವರ್ಷದ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು (DA Hike ) ಪ್ರಸ್ತುತ ಮೂಲ ವೇತನದ ಶೇ.31ರಿಂದ ಶೇ.35ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಆದೇಶಿಸಿದೆ.
ಏಪ್ರಿಲ್ 3ರಂದು ಕೇಂದ್ರ ಸರ್ಕಾರಿ ನೌಕರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿತ್ತು. ಕೇಂದ್ರ ಸರ್ಕಾರ ಹೆಚ್ಚಳ ಮಾಡಿದ ನಂತರ ರಾಜ್ಯ ಸರ್ಕಾರ ಕೂಡ ಹೆಚ್ಚಳ ಮಾಡುವುದು ವಾಡಿಕೆಯಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಈಗ ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.

ಜನವರಿ 1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ. 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.
ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಧನ್ಯವಾದ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

7ನೇ ವೇತನ ಆಯೋಗದ ಮಧ್ಯಂತರ ಪರಹಾರವಾಗಿ ಶೇ.17 ವೇತನ ಹೆಚ್ಚಳ ಮಾಡಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಹೆಚ್ಚಳವನ್ನು ಏಪ್ರಿಲ್ ತಿಂಗಳ ವೇತನದಲ್ಲಿಯೇ ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರವು ಕಳೆದ ಅಕ್ಟೋಬರ್‌ನಲ್ಲಿ ಶೇ. 3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದು 2022ರ ಜುಲೈ1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂ. ಭರಿಸಿತ್ತು. ಅದಕ್ಕೂ ಮೊದಲು ಏಪ್ರಿಲ್‌ನಲ್ಲಿ ಶೇ. 2.75 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿತ್ತು. ಇದು ಜನವರಿ 1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement