ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಈ ಸಂಬಂಧ ಸಾಹಿತಿ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದರು. ಆದರೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದಿದ್ದಾರೆ.
ಶಾಲಾ ಪಠ್ಯ ಪರಿಷ್ಕರಣೆ ಗೊಂದಲ ನಿವಾರಣೆಗೆ ಸಮಿತಿ ರಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಆದರೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪರಿಷ್ಕರಣೆಯಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷನಾಗಿಲ್ಲ. ಪಠ್ಯ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ. ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೆವಾರ್‌, ಚಕ್ರವರ್ತಿ ಸೂಲಿಬೆಲೆ ಪಾಠಗಳು ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ, ಆಕ್ಷೇಪ ಕೇಳಿಬಂದಿರುವ ಕೆಲ ಅಧ್ಯಾಯಗಳನ್ನು ಕೈಬಿಡಲು ನಿರ್ಧರಿಸಿದೆ ಎನ್ನಲಾಗಿದೆ. ಆದರೆ, 2023-24ನೇ ಶೈಕ್ಷಣಿಕ ಸಾಲಿಗೆ ಈಗಾಗಲೇ ಬಹುತೇಕ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳು ಮುದ್ರಣವಾಗಿ ಶಾಲೆಗಳನ್ನು ತಲುಪಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಮುದ್ರಿಸುವ ಪ್ರಕ್ರಿಯೆಗೆ ಕೈಹಾಕುವುದಿಲ್ಲ. ಬದಲಾಗಿ, ವಿತರಿಸಲಾಗಿರುವ ಪಠ್ಯದಲ್ಲಿನ ವಿವಾದಿತ ಹಾಗೂ ಆಕ್ಷೇಪಣೆ ಕೇಳಿಬಂದಿರುವ ಪಾಠಗಳನ್ನು ಪಟ್ಟಿಮಾಡಿ, ಅವುಗಳನ್ನು ಮಕ್ಕಳಿಗೆ ಬೋಧನೆ ಮಾಡದಂತೆ ಶಾಲೆಗಳಿಗೆ ಸುತ್ತೋಲೆ ಹೊರಡಿಸಲು ತೀರ್ಮಾನಿಸಿದೆ. ಈ ವಿಚಾರವನ್ನು ಮುಂದಿನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಚರ್ಚಿಸಿದ ನಂತರ ಅಧಿಕೃತವಾಗಿ ಪ್ರಕಟಿಸಲಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement