`ಗೃಹ ಲಕ್ಷ್ಮೀ’ ಯೋಜನೆಗೆ ಮನೆ ಬಾಗಿಲಲ್ಲೇ ಅರ್ಜಿ ಸ್ವೀಕಾರಕ್ಕೆ ಚಿಂತನೆ, ವಾರದೊಳಗೆ ಆ್ಯಪ್‌ ಸಿದ್ಧ : ಕೃಷ್ಣಬೈರೇಗೌಡ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಅರ್ಜಿ ಸಲ್ಲಿಕೆಯನ್ನು ಸುಲಭವಾಗಿಸಲು ರಾಜ್ಯ ಸರ್ಕಾರವು ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಅರ್ಜಿ ಸ್ವೀಕರಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಶುಕ್ರವಾರ ಕಂದಾಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಅನುಷ್ಠಾನಕ್ಕಾಗಿ ಕಂದಾಯ ಇಲಾಖೆ ಸಿಬ್ಬಂದಿಯನ್ನೂ ಬಳಸಿಕೊಳ್ಳಲಾಗುತ್ತಿದೆ. ಯೋಜನೆ ಅಡಿಯಲ್ಲಿ 1.30 ಕೋಟಿ ಜನರು ಅರ್ಜಿ ಸಲ್ಲಿಸುವ ನಿರೀಕ್ಷೆಯಿದ್ದು, ಅರ್ಜಿಗಳನ್ನು ಎರಡು ತಿಂಗಳೊಳಗೆ ಸ್ವೀಕರಿಸಿ ವಿಲೇವಾರಿ ಮಾಡಬೇಕಾಗಿದ್ದರಿಂದ ಫಲಾನುಭವಿಗಳ ಮನೆ ಬಾಗಿಲಿಗೇ ತೆರಳಿ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿನ 898 ನಾಡ ಕಚೇರಿ ಸೇರಿದಂತೆ 7 ಸಾವಿರಕ್ಕೂ ಹೆಚ್ಚಿನ ಸೇವಾ ಸಿಂಧು ಕಚೇರಿ, ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಕೆಲ ನಾಡಕಚೇರಿಗಳಲ್ಲಿ ಮೂಲಸೌಕರ್ಯ ಕೊರತೆಯಿದ್ದು, ಅಗತ್ಯ ವ್ಯವಸ್ಥೆ ಕಲ್ಪಿಸಲು ಚಿಂತಿಸಲಾಗಿದೆ. ತಾತ್ಕಾಲಿಕವಾಗಿ ಹೊರಗುತ್ತಿಗೆ ರೂಪದಲ್ಲಿ ಸೇವೆ ಬಳಸಿಕೊಳ್ಳುವ ಬಗ್ಗೆಯೂ ಪರಿಶೀಲನೆ ನಡೆದಿದೆ. ಜೂನ್ 15 ರಿಂದ ಅರ್ಜಿ ಸ್ವೀಕರಿಸಲಾಗುತ್ತದೆ. ಅಲ್ಪಾವಧಿಯಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಅರ್ಜಿ ಸ್ವೀಕರಿಸಲು ಬೇಕಾದ ಪೂರಕ ವ್ಯವಸ್ಥೆ ಕಲ್ಪಿಸಲು ಒತ್ತು ನೀಡಲಾಗಿದ್ದು, ವಾರದೊಳಗೆ ಆ್ಯಪ್‌ ಸಿದ್ಧವಾಗಲಿದೆ ಎಂದು ಹೇಳಿದರು.

ಇಂದಿನ ಪ್ರಮುಖ ಸುದ್ದಿ :-   ಕಾವೇರಿ : ರೈತರ ಪ್ರತಿಭಟನೆಗೆ ನಿರ್ಮಲಾನಂದನಾಥ ಸ್ವಾಮೀಜಿ ಸಾಥ್

”ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸಲಿದೆ. ಕಂದಾಯ ಇಲಾಖೆಯು ಸಾಮಾಜಿಕ ಭದ್ರತಾ ಕಾರ್ಯಕ್ರಮಗಳಡಿ 78 ಲಕ್ಷ ಮಂದಿಗೆ ನಾನಾ ರೀತಿಯ ಪಿಂಚಣಿ ವಿತರಿಸುತ್ತಿರುವ ಅನುಭವವಿರುವ ಕಾರಣಕ್ಕೆ ಮುಖ್ಯಮಂತ್ರಿಗಳ ಸೂಚನೆಯಂತೆ ತಳಮಟ್ಟದಲ್ಲಿ ಕಂದಾಯ ಇಲಾಖೆಯು ಯೋಜನೆ ಅನುಷ್ಠಾನಕ್ಕೆ ಸಹಕಾರ ನೀಡಲಿದೆ ಎಂದರು.
ಸಾಮಾಜಿಕ ಭದ್ರತಾ ಕಾರ್ಯಕ್ರಮಗಳಡಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಕಲಚೇತನರು, ವಿಧವೆಯರು, ಅವಿವಾಹಿತ ಅಥವಾ ವಿಚ್ಛೇದಿತ ಮಹಿಳೆಯರು, ತೃತೀಯ ಲಿಂಗಿಗಳು ಸೇರಿದಂತೆ ಅಶಕ್ತರಾದವರಿಗೆ ಪಿಂಚಣಿ ಸೌಲಭ್ಯ ಕಲ್ಪಿಸಿದೆ. ಪಿಂಚಣಿ ಸೌಲಭ್ಯ ಫಲಾನುಭವಿಗಳ ಪೈಕಿ ಅರ್ಹರಿಗೂ ಗೃಹಲಕ್ಷ್ಮಿ ಯೋಜನೆಯಡಿ ನೆರವು ಸಿಗಲಿದೆ ಎಂದು ಸ್ಪಷ್ಟಪಡಿಸಿದರು.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement