ಹುಬ್ಬಳ್ಳಿ: ಹುಬ್ಬಳ್ಳಿ ಏರ್ಪೋರ್ಟ್ (Hubballi Airport) ಮೇಲ್ದರ್ಜೆಗೆ ಏರಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, 273 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ಸೂಚಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಒಮ್ಮೆಲೇ 1,400 ಪ್ರಯಾಣಿಕರನ್ನು ನಿಭಾಯಿಸುವ ಯೋಜನೆ ಜನವರಿಯಲ್ಲಿ ಆರಂಭವಾಗುವ ಸಾಧ್ಯತೆ ಇದ್ದು, ಎರಡು ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಪ್ರಲ್ಹಾದ್ ಜೋಶಿ, “ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂ.ಗಳ ಅನುಮೋದನೆ ನೀಡಲಾಗಿದೆ. ಹೊಸ ಟರ್ಮಿನಲ್ 20,000 ಚದರ ಮೀಟರ್ (ನೆಲ + ಮೊದಲ ಮಹಡಿ) ಪ್ರದೇಶದಲ್ಲಿ ವಿಸ್ತರಣೆಯಾಗಲಿದೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣವು ಏಕಕಾಲಕ್ಕೆ 1400ಕ್ಕೂ ಅಧಿಕ ಪ್ರಯಾಣಿಕರನ್ನು (ಆಗಮಿಸುವ ಮತ್ತು ನಿರ್ಗಮಿಸುವ) ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ವಿಸ್ತರಣೆ ಕಾಮಗಾರಿ ಜನವರಿಯಲ್ಲಿ ಆರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತವಾಗಿಸುವ ಗುರಿ ಇದೆ” ಎಂದು ತಿಳಿಸಿದ್ದಾರೆ. ಅಲ್ಲದೆ, ಇದಕ್ಕೆ ಒಪ್ಪಿಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕೃತಜ್ಞತೆ ತಿಳಿಸಿದ್ದಾರೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣವು ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣವೂ ಹೌದು. ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ 2030 ರೊಳಗೆ ಶೇ 50 ರಷ್ಟು ಗ್ರೀನ್ ಎನರ್ಜಿಯತ್ತ ದೇಶ ಸಾಗಬೇಕಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಶೇ.100 ರಷ್ಟು ಅಂದರೆ ಸಂಪೂರ್ಣ ಸೌರಶಕ್ತಿಯ ಮೂಲಕ ಕಾರ್ಯನಿರ್ವಹಿಸಲಿದೆ ಎಂದು ಈ ಹಿಂದೆ ಜೋಶಿ ಟ್ವೀಟ್ ಮಾಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ