ಬೆಂಗಳೂರು: ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ವ್ಯಾಪಾರಿಗಳು ಮತ್ತು ಸಣ್ಣ ಕೈಗಾರಿಕೆಗಳ ಮಾಲೀಕರು ಗುರುವಾರ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನಾ ರ‍್ಯಾಲಿಗಳನ್ನು ನಡೆಸಿದರು.
ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ಬಂದ್‌ಗೆ ಕರೆ ನೀಡಿತ್ತು. ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬೆಳಗಾವಿ, ಗದಗ, ಬಳ್ಳಾರಿ ಹಾಗೂ ವಿಜಯನಗರ ಮೊದಲಾದ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಎಫ್ಕೆಸಿಸಿಐ ಮತ್ತು ದಕ್ಷಿಣ ಕರ್ನಾಟಕದ ವಾಣಿಜ್ಯ ಉದ್ಯಮಗಳು ಕರ್ನಾಟಕ ಬಂದ್ನಿಂದ ಹಿಂದೆ ಸರಿದುಕೊಂಡಿವೆ. ಕೈಗಾರಿಕೋದ್ಯಮಿಗಳು ಮತ್ತು ಸಣ್ಣ ವ್ಯಾಪಾರಿಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ವಾಣಿಜ್ಯೋದ್ಯಮಿಗಳು ಬಂದ್ ಗೆ ಬೆಂಬಲ ನೀಡಿದ್ದು,ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಸ್ತಬ್ಧವಾಗಿತ್ತು. ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
ರಾಜ್ಯದ ಪ್ರತಿಯೊಂದು ಮನೆಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಯೋಜನೆಗಾಗಿ ರಾಜ್ಯ ಸರ್ಕಾರವು ಈ ವಾರದ ಆರಂಭದಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವೇಳೆ ವಿದ್ಯುತ್ ದರವೂ ಏರಿಕೆಯಗಿತ್ತು. ಅನೇಕರಿಗೆ ಸಾವಿರಾರು ರೂಪಾಯಿಗಳ ವಿದ್ಯುತ್ ಬಿಲ್ ಬಂದಿತ್ತು. ಇದನ್ನು ಖಂಡಿಸಿ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು.
ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ವಿಜಯನಗರ, ದಾವಣಗೆರೆ, ಕೊಪ್ಪಳ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಬ್ಯಾನರ್, ಭಿತ್ತಿಪತ್ರ, ಫಲಕಗಳನ್ನು ಹಿಡಿದುಕೊಂಡು ವ್ಯಾಪಾರಸ್ಥರು, ಕೈಗಾರಿಕೋದ್ಯಮಿಗಳು ಮೆರವಣಿಗೆ ನಡೆಸಿದರು. ಹಾಗೂ ವಿದ್ಯುತ್ ದರ ಏರಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದರು.
ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಸ್ಥರು ಹಾಗೂ ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳ ಮಾಲೀಕರು ಬ್ಯಾನರ್, ಫಲಕಗಳನ್ನು ಹಿಡಿದು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.
ಬಂದ್ ಕರೆಗೆ ಪ್ರತಿಕ್ರಿಯೆಯಾಗಿ ರಾಜ್ಯದ ಹಲವು ಭಾಗಗಳಲ್ಲಿ ಕೈಗಾರಿಕೆಗಳನ್ನು ಮುಚ್ಚಲಾಗಿತ್ತು ಮತ್ತು ಸಣ್ಣ ಕೈಗಾರಿಕೆಗಳಲ್ಲಿ ಉತ್ಪಾದನೆಯನ್ನು ನಿಲ್ಲಿಸಲಾಯಿತು.
ನಿಮ್ಮ ಕಾಮೆಂಟ್ ಬರೆಯಿರಿ