ಬೆಂಗಳೂರು : ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಬಿಜೆಪಿ ಭಾನುವಾರ ವಿಪಕ್ಷ ನಾಯಕನ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬುಲಾವ್ ಮಾಡಿದ್ದು ನಾಳೆ ಭಾನುವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ, ಭಾನುವಾರ ಬೆಂಗಳೂರಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ರದ್ದು ಮಾಡಲಾಗಿದೆ. ಭಾನುವಾರ ಅಪರಾಹ್ನ 3 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಭಾನುವಾರ ಯಡಿಯೂರಪ್ಪ ದೆಹಲಿಯಲ್ಲಿಯೇ ಉಳಿಯಲಿದ್ದು, ರಾಜ್ಯಾಧ್ಯಕ್ಷರ ಆಯ್ಕೆ, ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಕೆಲ ಹೆಸರುಗಳು ಚಾಲ್ತಿಯಲ್ಲಿವೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಸಚಿವರಾದ ಆರ್.ಅಶೋಕ್, ಶಾಸಕ ಅರವಿಂದ ಬೆಲ್ಲದ ಹಾಗೂ ಸುನಿಲಕುಮಾರ ಅವರ ಅವರ ಹೆಸರುಗಳು ಕೇಳಿಬಂದಿವೆ. ಅಂತಿಮವಾಗಿ ಬಿಜೆಪಿ ಯಾರ ಹೆಸರನ್ನು ಸೂಚಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.


ನಿಮ್ಮ ಕಾಮೆಂಟ್ ಬರೆಯಿರಿ