ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣಕ್ಕೆ ಮರುಜೀವ ನೀಡಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವದ, “ನಾವು ಹಿಂದೆ ಬಿಜೆಪಿ ಸರ್ಕಾರದ ಬಿಟ್ ಕಾಯಿನ್ ವಿಚಾರದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಬಗ್ಗೆ ಮಾತನಾಡಿದ್ದೆವು. ಈಗ ಬಿಟ್ ಕಾಯಿನ್ ಪ್ರಕರಣ ಮರು ತನಿಖೆಗೆ ಅದೇಶಿಸಿದ್ದೇವೆ. ಸಿಐಡಿ ಅಡಿಯಲ್ಲಿ ಎಸ್‌ಐಟಿ ರಚನೆ ಮಾಡಿದ್ದೇವೆ. ಸಂಬಂಧಿಸಿದ ಆದೇಶಗಳನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.
2020ರಲ್ಲಿ ಬಿಟ್ ಕಾಯಿನ್ ಹಗರಣದ ಬಗ್ಗೆ ಬೆಂಗಳೂರಿನ ಕಾಟನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿತ್ತು. ಹೀಗಾಗಿ ವಿಶೇಷ ತಂಡ ರಚಿಸಿ ಹೆಚ್ಚಿನ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ ಅವರು ಸಿಐಡಿ ಡಿಜಿಪಿ ಎಂ.ಎ. ಸಲೀಂ ಅವರಿಗೆ ಪತ್ರ ಬರೆದಿದ್ದರು. ಬಳಿಕ ಅಲೋಕಮೋಹನ ಅವರು ಪತ್ರದ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಸರ್ಕಾರ ಮರು ತನಿಖೆಗೆ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ
ಪ್ರಕರಣದ ಪ್ರಮುಖ ಆರೋಪಿ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (26) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್ ಜಾಲತಾಣ ಹ್ಯಾಕ್ ಮಾಡಿ 46 ಕೋಟಿ ರೂ. ದೋಚಿದ್ದ ಸಂಗತಿ ಕಂಡುಬಂದಿತ್ತು. ಅಲ್ಲದೆ, ಹ್ಯಾಕರ್ ಶ್ರೀಕಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಸಿದ್ದ ಬಿಟ್ ಕಾಯಿನ್ ಪ್ರಕರಣಗಳು ಹೊರಬಂದಿದ್ದವು. ಸಿಸಿಬಿ ಪೊಲೀಸರು ತರಾತುರಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ಸಿಸಿಬಿ ಪೊಲೀಸರು ಪ್ರಕರಣದ ಬಗ್ಗೆ ಆಳಕ್ಕೆ ಹೋಗಿಲ್ಲ ಎಂಬ ಅನುಮಾನಗಳು ವ್ಯಕ್ತವಾಗಿದ್ದವು. ಇದೀಗ ರಾಜ್ಯ ಸರ್ಕಾರ ಮರುತನಿಖೆಗೆ ಆದೇಶಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ