ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಯತ್ನ ಪ್ರಕರಣ : ಸದನದಲ್ಲಿ ಕೋಲಾಹಲ, ಸಚಿವ ಚೆಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಆತ್ಮಹತ್ಯೆ ಯತ್ನದ ಪ್ರಕರಣ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅವರ ರಾಜೀನಾಮೆಗೆ ಆಗ್ರಹಿಸಿದರು.
ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,‌ ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ ಜಗದೀಶ ಅವರನ್ನು ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆ ನಡೆದು ದಿನ ಕಳೆದರೂ ಎಫ್ಐಆರ್ ದಾಖಲಾಗಿಲ್ಲ. ಸರ್ಕಾರ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ರಕ್ಷಿಸುತ್ತಿದೆ. ತಕ್ಷಣ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಡೆತ್ ನೋಟ್ ನಲ್ಲಿ ಹೆಸರು ಇದ್ದವರ ವಿರುದ್ಧವೂ ಎಫ್ ಐ ಆರ್ ಆಗಬೇಕು. ಡೆತ್ ನೋಟ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಹೆಸರು ಇದೆ. ಈ ನಿಟ್ಟಿನಲ್ಲಿ ಸಚಿವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆಗುತ್ತಿಗೆದಾರರೊಬ್ಬರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಾಗ ಬಿಜೆಪಿ ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದರು ಎಂದುಅವರು ಪ್ರಸ್ತಾಪಿಸಿದರು.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸರ್ಕಾರ ಅಧಿಕಾರಕ್ಕೆ ಬಂದ 50 ದಿನಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ರಾಜ್ಯದ ಕೆಲವು ಭಾಗಗಳಲ್ಲಿ ಗ್ರಾಪಂಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಕಾರಣಕ್ಕೆ ಒತ್ತಡ ಹಾಕಿ ವರ್ಗಾವಣೆ ಮಾಡಿರುವುದೇ ಜಗದೀಶ್ ಆತ್ಮಹತ್ಯೆ ಯತ್ನಕ್ಕೆ ಕಾರಣ. ಆತ್ಮಹತ್ಯೆಗೆ ಯತ್ನಿಸಿದ ಕೆಎಸ್‌ಆರ್‌ಟಿಸಿ ನೌಕರನ ಪತ್ನಿ ಪಂಚಾಯತ ಸದಸ್ಯೆಯಾಗಿದ್ದು, ಅವರ ಮೇಲೆ ಅನಗತ್ಯ ಒತ್ತಡ ಹೇರಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ಕೆ.ಜೆ. ಜಾರ್ಜ್ ಮತ್ತು ಈಶ್ವರಪ್ಪ ಅವರು ಅಧಿಕಾರದಲ್ಲಿದ್ದಾಗ ಇದೇ ರೀತಿಯ ಘಟನೆಗಳು ನಡೆದಾಗ ರಾಜೀನಾಮೆ ನೀಡಿದ ಉದಾಹರಣೆಗಳನ್ನು ಉಲ್ಲೇಖಿಸಿ ಜೆಡಿಎಸ್ ನಾಯಕರು ಸಹ ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯಿಸಿದರು.
ಸಚಿವ ಚಲುವರಾಯಸ್ವಾಮಿ ವಿರುದ್ಧ ಸರಣಿ ಆರೋಪ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕರಾದ ಪಿಎಂ ನರೇಂದ್ರಸ್ವಾಮಿ ಮತ್ತು ರಮೇಶ್ ಬಂಡಿಸಿದ್ದೇಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆಯಿತು.
ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಇದು ಕಮಿಷನ್ ಸರ್ಕಾರ, ಕೊಲೆಗಡುಕ ಸರ್ಕಾರ ಎಂದು ಘೋಷಣೆ ಕೂಗಿದರು. ಗದ್ದಲ ಹೆಚ್ಚಾಗುತ್ತಿದ್ದಂತೆ ಸ್ಪೀಕರ್ ಯು.ಟಿ. ಖಾದರ್ ಕಲಾಪ ಮುಂದೂಡಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement