ಕರ್ನಾಟಕ ಬಜೆಟ್‌ 2023-24 : ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್‌, ರಾಷ್ಟ್ರೀಯ ಶಿಕ್ಷಣ ನೀತಿ ರದ್ದು, 10ನೇ ತರಗತಿ ವರೆಗೆ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ಬಾಳೆಹಣ್ಣು/ಶೇಂಗಾಚಿಕ್ಕಿ ವಿತರಣೆ

ಬೆಂಗಳೂರು: ರಾಜ್ಯದ ಅಸ್ಮಿತೆ ಎತ್ತಿಹಿಡಿಯುವ ಹೊಸ ಶಿಕ್ಷಣ ನೀತಿ ರೂಪಿಸುವ ಬಗ್ಗೆ ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಒಟ್ಟು 37,587 ಕೋಟಿ ರೂ. ಹಣವನ್ನು ಮೀಸಲು ಇರಿಸಲಾಗಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಎಂದು ರಾಜ್ಯ ಬಜೆಟ್​ನಲ್ಲಿ ಉಲ್ಲೇಖಿಸಲಾಗಿದ್ದು ಅದನ್ನು ರದ್ದುಗೊಳಿಸುವುದಾಗಿ ಹೇಳಲಾಗಿದೆ.
ಬಜೆಟ್​ನಲ್ಲಿ “ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣ ನೀಡುವ ಹಾಗೂ ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶವನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.
ಶಿಕ್ಷಣಕ್ಕೆ ಸಂಬಂಧಪಟ್ಟ ಹೊಸ ಕಲ್ಪನೆಗಳನ್ನು ವಾಸ್ತವಕ್ಕೆ ತರಲು ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಲು ಮಾಧ್ಯಮಿಕ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನೋವೇಶನ್ ಲ್ಯಾಬ್‌ ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, 2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು ಎರಡುಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ.
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ ದಿಂದ ; 45,000 ರೂ. ಗಳವರೆಗೆ ಹೆಚ್ಚಿಸಲಾಗಿದೆ. ಒಟ್ಟು 47,272 ಶಾಲೆಗಳು ಹಾಗೂ 1231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ 153 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ಬಾಳೆಹಣ್ಣು/ಶೇಂಗಾಚಿಕ್ಕಿ
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು,ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು. ಹಾಗೂ ಈಗ ಅದನ್ನು ವಾರದಲ್ಲಿ ಎರಡು ದಿನ ವಿತರಿಸಲಾಗುತ್ತದೆ. ಇದಕ್ಕೆ ಹೆಚ್ಚುವರಿ 280 ಕೋಟಿ ರೂ.ವೆಚ್ಚವಾಗಲಿದೆ.
ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶ ಉಳ್ಳ ಶಾಲೆಗಳ ಸುತ್ತಮುತ್ತ ಒಂದು ಕಾಲಾವಧಿಯಲ್ಲಿ 50 ಲಕ್ಷ ಸಸಿಗಳನ್ನು ನೆಡುವ `ಸಸ್ಯ ಶ್ಯಾಮಲ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಪ್ರಸ್ತಾಪ ಮಾಡಲಾಗಿದೆ.
ಕಲಿಕಾ ನ್ಯೂನತೆ ಹೋಗಲಾಡಿಸಲು ಯೋಜನೆ
ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ‘ಮರುಸಿಂಚನ’ ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ನೀಡಲಾಗುವುದು.

ಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್‌…
ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸ್ಸು ‌ಪಡೆಯುವುದಾಗಿ ಬಜೆಟ್‌ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಿಂದಿನ ಸರ್ಕಾರವು ಎ.ಪಿ.ಎಂ.ಸಿ. ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸದೃಢ ಮಾರುಕಟ್ಟೆ ಜಾಲವನ್ನು ದುರ್ಬಲಗೊಳಿಸಿತ್ತು. ಇದರ ಮೇಲೆ ಅವಲಂಬಿತವಾಗಿರುವ ರೈತರ ಬದುಕಿನ ಅನಿಶ್ಚಿತತೆಗೆ ಕಾರಣವಾಗಿದೆ. ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯ ಮೊದಲು, 2018-19 ರಲ್ಲಿ ರಾಜ್ಯದ 167 ಕೃಷಿ ಉತ್ಪನ್ನ ಮಾರುಕಟ್ಟೆಗಳ ಒಟ್ಟು ಆದಾಯ 570 ರಿಂದ 600 ಕೋಟಿ ರೂ. ಗಳಷ್ಟಿತ್ತು. ಆದರೆ 2022-23 ರಲ್ಲಿ ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿಯ ನಂತರ ಕೇವಲ 193 ಕೋಟಿ ರೂ.ಗಳಿಗೆ ಕುಸಿದಿದೆ. ಜೊತೆಗೆ ಖಾಸಗಿ ಸಂಸ್ಥೆಗಳುಮುಕ್ತ ಮಾರುಕಟ್ಟೆಯಲ್ಲಿ ರೈತರನ್ನು ವಂಚಿಸಿದ ನಿದರ್ಶನಗಳಿವೆ. ಈ ಅವ್ಯವಸ್ಥೆಯನ್ನು ಸರಿಪಡಿಸಿ ರೈತರ ಹಿತರಕ್ಷಣೆ ಮಾಡಲು ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್‌ ಪಡೆಯಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಹಿಂದಿನ ಬಿಜೆಪಿ ಸರ್ಕಾರ 2020ರಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿತ್ತು. ಇದರಲ್ಲಿ ವ್ಯಾಪಾರಸ್ಥರು, ಕಂಪನಿಗಳು ನೇರವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಬೆಳೆ ಖರೀದಿಸಬಹುದು ಎಂದು ಹೇಳಲಾಗಿತ್ತು. ರೈತರು ಯಾವುದೇ ಜಿಲ್ಲೆಯ ಎಪಿಎಂಸಿಯಲ್ಲಿ ಬೆಳೆ ಮಾರಾಟಕ್ಕೆ ವ್ಯವಹಾರ ನಡೆಸಬಹುದು, ರೈತರ ಉತ್ಪನ್ನಗಳ ಮಾರಾಟಕ್ಕೆ ಇ- ಮಾರ್ಕೆಟಿಂಗ್‌ ಸೌಲಭ್ಯದ ಲಾಭ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ಪ್ರಮುಖ ಸುದ್ದಿ :-   ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

ಹಮಾಲರ ಅಂತ್ಯಸಂಸ್ಕಾರ ಸಹಾಯಧನ ಹೆಚ್ಚಳ
‘ಕಾಯಕ ನಿಧಿ’ ಯೋಜನೆಯಡಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರು ಮರಣ ಹೊಂದಿದರೆ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು 10,000 ರೂ. ಗಳಿಂದ 25,000 ರೂ. ಗಳಿಗೆ ಹೆಚ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement