ಚಿಕ್ಕೋಡಿ : ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯ ಹತ್ಯೆ

ಬೆಳಗಾವಿ : ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಲಾಗಿದೆ ಎಂದು ಎಂದು ವರದಿಯಾಗಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ಮುನಿ ವಾಸವಿದ್ದರು.
ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಅವರಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು‌ ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಜೈನಮುನಿಯ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಪೊಲೀಸರು ತೀವ್ರ ವಿಚಾರಣೆ ನಡೆಸಿದ ನಂತರ ಮುನಿಗಳನ್ನು ಆಶ್ರಮದಿಂದಲೇ ಅಪಹರಿಸಿ ಕೊಲೆ ಮಾಡಿರುವ ಸಂಗತಿಯನ್ನು ಬಾಯ್ಬಿಟ್ಟಿದ್ದಾರೆ.
ತನಿಖೆ ಸಂದರ್ಭದಲ್ಲಿ ರಾತ್ರಿಯಿಡೀ ಇಬ್ಬರು ಆರೋಪಿಗಳು ಪೊಲೀಸರಿಗೆ ದಿಕ್ಕುತಪ್ಪಿಸಿದ್ದರು. ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ನೀಡುತ್ತಿರಲಿಲ್ಲ. ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದಿರುವುದಾಗಿ ಹೇಳಿದ್ದಾರೆ. ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿರುವುದಾಗಿ ತಿಳಿಸಿದ್ದರು. ಕಟಕಬಾವಿ ಸೇರಿದಂತೆ ರಾತ್ರಿಯಿಡೀ ಪರಿಶೀಲನೆ ನಡೆಸಿದ ಪೊಲೀಸರಿಗೆ ಮೃತದೇಹ ದೊರೆತಿಲ್ಲ. ಹೀಗಾಗಿ ಇಂದು ಮುನಿಗಳ ಮೃತದೇಹದ ಹುಡುಕಾಟ ನಡೆಯಲಿದೆ.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement