ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಖರ್ಗೆ ಅವರ ಮೈಬಣ್ಣದ ಬಗ್ಗೆ ಮಾತನಾಡುವ ಮೂಲಕ ಅವಹೇಳನ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತ ರಾಜೀವ ಜಾನೆ ಎಂಬವರು ಬುಧವಾರ ಸಂಜೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಗುರುವಾರ ನಗರದ 5ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದಿಂದ ಅನುಮತಿ ಪಡೆದು ಐಪಿಎಸ್ 504 ( ಉದ್ದೇಶಪೂರ್ವಕ ಅವಹೇಳನಕಾರಿ ನಿಂದನೆ) ಅಡಿ ಪ್ರಕರಣ ದಾಖಲಾಗಿದೆ.
ಇದಕ್ಕೂ ಮುನ್ನ ಆಗಸ್ಟ್ 1 ರಂದು ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆದ ಸಾರ್ವಜನಿಕ ಪ್ರತಿಭಟನೆ ವೇಳೆ ಆರಗ ಜ್ಞಾನೇಂದ್ರ, ಬೀದರಿನ ಜನರು ಸುಡುವ ಬಿಸಿಲಿನಿಂದ ಕಪ್ಪಾಗಿದ್ದಾರೆ ಮತ್ತು ಅವರ ದುಃಸ್ಥಿತಿ “ನಮಗೆ ಖರ್ಗೆ ಅವರನ್ನು ನೋಡಿದರೆ” ಅರ್ಥವಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ