ಬೆಂಗಳೂರು : ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬಡತನ ನಿವಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಹುದು. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಮಹಿಳೆಯರಿಗಾಗಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರುತ್ತಿದೆ ಎಂದರು.
ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಈಗಾಗಲೆ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆʼ ಎಂದು ಹೇಳಿದರು.
ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆಗೂ ಮೊದಲು ನಾವು ಆಶ್ವಾಸನೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಮೂರು ವಾರಗಳಲ್ಲಿಯೇ ಜಾರಿಗೆ ಮುಂದಾದೆವು. ಎಲ್ಲ ಸವಲತ್ತುಗಳನ್ನು ಜನರಿಗೆ ನೇರವಾಗಿ ತಲುಪಿಸುತ್ತಿದ್ದೇವೆ ಎಂದರು.
ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ. ಶಕ್ತಿ ಯೋಜನೆ ನಮ್ಮ ಆರ್ಥಿಕ ಶಕ್ತಿಗೆ ನವ ಚೈತನ್ಯವನ್ನೇ ಉಂಟು ಮಾಡಿದೆ ಎಂದರು.
ಎರಡನೇ ಗ್ಯಾರಂಟಿ 200 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋ ಯೋಜನೆ ಜುಲೈ 1 ರಿಂದ ಜಾರಿಗೆ ಬಂದಿದ್ದು, ಆಗಸ್ಟ್ 1ರಿಂದ ಅವರಿಗೆ ಶೂನ್ಯ ಬಿಲ್ ಬರುತ್ತಿದೆ. ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.
ಮತ್ತೊಂದು ಗ್ಯಾರಂಟಿ ಅನ್ನ ಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಕೇಂದ್ರವು ನೀಡುವ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲು ಕ್ರಮ ತೆಗೆದುಕೊಳ್ಳುತ್ತಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಗದು ವರ್ಗಾಯಿಸಲು ನಿರ್ಧರಿಸಿದ್ದು, ಈ ವರೆಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಸದ್ಯದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಿದ್ದೇವೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ