ಬೆಂಗಳೂರು: ಹೊಲಗೇರಿ ಪದ ಬಳಸುವ ಮೂಲಕ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ತೋಟಗಾರಿಗೆ ಹಾಗೂ ಗಣಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ ವಿರುದ್ಧ ಪೊಲೀಸ್ ದೂರು ನೀಡಲಾಗಿದೆ ಎಂದು ವರದಿಯಾಗಿದೆ.
ಎಸ್ ಸಿ /ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಆದರೆ ಅವರು ಸಚಿವರಾದ ಕಾರಣ ಅವರ ಮೇಲೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕಾಗಿದೆ ಎನ್ನಲಾಗಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸಂದರ್ಶನ ಅದರಲ್ಲಿ ಸಚಿವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ಸಂದರ್ಶನದ ವೀಡಿಯೊದಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ದಾವಣಗೆರೆ ನಗರದ ಅಶೋಕ್ ಥಿಯೇಟರ್ ಬಳಿ ನಿರ್ಮಾಣಗೊಂಡಿರುವ ಅಂಡರ್ ಪಾಸ್ ಬಗ್ಗೆ ಅಭಿಪ್ರಾಯ ಕೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಎಸ್‌ಎಸ್ ಮಲ್ಲಿಕಾರ್ಜುನ ಅವರು, ” ಹಲವು ಬಾರಿ ನಾನು ಪ್ರಶ್ನೆ ಮಾಡಿದ್ದೆ, ಸಂಬಂಧಪಟ್ಟ ಇಂಜಿನಿಯರ್ ಗಳನ್ನು ತರಾಟೆಗೆ ತೆಗೆದುಕೊಂಡಿದ್ದೆ. ಊರನ್ನು ಹೊಲೆಗೇರಿ ಮಾಡಬೇಡಿ ಎಂದು ಹೇಳಿದ್ದೆ” ಎಂದು ಸಂದರ್ಶನದಲ್ಲಿ ಹೇಳಿದ್ದರು.
ಸದ್ಯ ಆ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಆಕ್ರೋಶ ವ್ಯಕ್ತವಾಗಿದೆ. ನಟ ಉಪೇಂದ್ರ ಅವರ ಮೇಲೆ ಪ್ರಕರಣ ದಾಖಲಿಸಿದಂತೆ ಸಚಿವರ ಮೇಲೆ ಯಾವಾಗ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಲವರು ಪ್ರಶ್ನಿಸಿದ್ದಾರೆ. ಸದ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವೀಡಿಯೋ ವೈರಲ್ ಆಗುತ್ತಿದ್ದಂತೆ ದಾವಣಗೆರಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಮಲ್ಲಿಕಾರ್ಜುನ, ಹೇಳಿಕೆಯನ್ನು ತಿರುಚಲಾಗಿದೆ, ನಾನು ಆ ರೀತಿಯಾಗಿ ಹೇಳಿಲ್ಲ ಎಂದು ಹೇಳಿದ್ದಾರೆ. ಒಳ್ಳಯದನ್ನು ಮಾಡಿ, ಹೊಲಸು ಮಾಡಬೇಡಿ ಎಂದು ತಾನು ಹೇಳಿದ್ದೆ ಎಂದು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ