ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಶ್ವ ವಿದ್ಯಾಲಯಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವು ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಇಂದಿನ (ಆಗಸ್ಟ್ 21) ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಯೋಜನೆಯಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಇದಕ್ಕಾಗಿ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಯೋಜನೆಯಡಿ 230 ಕೋಟಿ ರೂ.ಗಳ ಹಣ ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ