ನವದೆಹಲಿ: ಕಾವೇರಿ ನದಿಯಿಂದ ಪ್ರತಿ ನಿತ್ಯ 24,000 ಕ್ಯೂಸೆಕ್ ನೀರು ಬಿಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ಹೊರಡಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಶುಕ್ರವಾರಕ್ಕೆ(ಸೆಪ್ಟಂಬರ್ 1) ಮುಂದೂಡಿದೆ.
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡುವ ಕುರಿತು ತೀರ್ಮಾನಿಸುವಂತೆ ಆಗಸ್ಟ್ 28 ರಂದು ಸಭೆ ಸೇರಲು ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ನ್ಯಾಯಾಲಯ ಸೂಚಿಸಿದೆ.
ಎರಡು ರಾಜ್ಯಗಳ ಜಲಾಶಯಗಳ ವಾಸ್ತವ ಸ್ಥಿತಿ ಕುರಿತು ವರದಿ ಸಲ್ಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ನಾವು ತಜ್ಞರಲ್ಲ, ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ನ್ಯಾಯಾಧೀರಾದ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಿಳಿಸಿದೆ.
ಕೃಷ್ಣರಾಜ ಸಾಗರ (ಕೆಆರ್ ಎಸ್) ಅಣೆಕಟ್ಟು ಹಾಗೂ ಕಬಿನಿ ಜಲಾಶಯಗಳ ನೀರಿನ ಮಟ್ಟದ ವರದಿಯನ್ನು ತನಗೆ ಸಲ್ಲಿಸಬೇಕು. ಜೊತೆಗೆ, ಕಾವೇರಿ ನದಿ ನೀರು ಬಿಡುಗಡೆಯ ಸಂಬಂಧ 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಪಾಲನೆಯಾಗುತ್ತಿದೆಯೇ ಎಂಬ ಬಗ್ಗೆ ಪ್ರಾಧಿಕಾರದ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿರುವ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿದೆ.
ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ನೀಡಿರುವ ಸೂಚನೆಯನ್ನು ಕರ್ನಾಟಕ ಸರ್ಕಾರ ಪಾಲಿಸಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಕರ್ನಾಟಕದ ಕೆಆರ್ ಎಸ್ ಜಲಾಶಯದಿಂದ, ಕಬಿನಿ ಜಲಾಶಯದಿಂದ ಆ. 11ರಿಂದ ಮುಂದಿನ 15 ದಿನಗಳವರೆಗೆ ಒಟ್ಟು 10 ಸಾವಿರ ಕ್ಯುಸೆಕ್ಸ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಕರ್ನಾಟಕ ಸರ್ಕಾರಕ್ಕೆ ಆಗಸ್ಟ್ 11ರಂದು ಸೂಚನೆ ನೀಡಿದೆ. ಆದರೆ, ಅದನ್ನು ಕರ್ನಾಟಕ ಪಾಲಿಸಿಲ್ಲ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ನಿಮ್ಮ ಕಾಮೆಂಟ್ ಬರೆಯಿರಿ