ನವದೆಹಲಿ : ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯು ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ಸೋಮವಾರ ನಡೆದ ಸಭೆಯ ನಂತರ ಈ ಸೂಚನೆ ನೀಡಲಾಗಿದೆ. ಮುಂದಿನ 15 ದಿನ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೂಚಿಸಿದೆ. ಸದ್ಯ ತಮಿಳುನಾಡಿಗೆ ಪ್ರತಿ ದಿನ 1,900 ಕ್ಯೂಸೆಕ್ ನೀರು ಕರ್ನಾಟಕದಿಂದ ಹರಿಯುತ್ತಿದೆ.
. ಕರ್ನಾಟಕ, ತಮಿಳುನಾಡು ಅಧಿಕಾರಿಗಳು ಮತ್ತು ಕೇಂದ್ರ ಜಲ ಆಯೋಗದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಎರಡು ರಾಜ್ಯಗಳ ಜಲಾಶಯಗಳ ನೀರಿನ ಸಂಗ್ರಹ, ಮಳೆಯ ಪ್ರಮಾಣದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಎರಡು ರಾಜ್ಯಗಳ ವಾಸ್ತವ ಪರಿಸ್ಥಿತಿ ಲೆಕ್ಕಾಹಾಕಿ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣ ಸಮಿತಿ ಸೂಚನೆ ನೀಡಿದೆ. ಬಿಳಿಗುಂಡ್ಳು ಮಾಪನ ಕೇಂದ್ರದಲ್ಲಿ 5 ಸಾವಿರ ಕ್ಯೂಸೆಕ್ ನೀರು ಹರಿಯಬೇಕಿದೆ ಎಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ತನ್ನ ಸಭೆಯಲ್ಲಿ ತಿಳಿಸಿದೆ. ಇದರ ಬೆನ್ನಲ್ಲಿಯೇ ಮಂಗಳವಾರ ದೆಹಲಿಯಲ್ಲಿ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಿಡಬ್ಲ್ಯೂಎಂಸಿ ಸೂಚಿಸಿರುವಷ್ಟು ನೀರು ಬಿಡಲು ಆಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ವಾದಿಸಲಿದೆ. ಮಂಗಳವಾರ ಪ್ರಾಧಿಕಾರದ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ.
ಕಳೆದ ಬಾರಿ ಪ್ರತಿ ದಿನ 15 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಸಿಡಬ್ಲ್ಯೂಎಂಸಿ ಸೂಚಿಸಿತ್ತು. ಅದಾದ ಬಳಿಕ ಈ ಪ್ರಮಾಣವನ್ನು ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ 10 ಸಾವಿರ ಕ್ಯೂಸೆಕ್‌ಗೆ ಇಳಿಸಿ ಆದೇಶಿಸಿತ್ತು. ಇದರ ಬೆನ್ನಲ್ಲಿಯೇ ಕರ್ನಾಟಕ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳು, ಸಾರ್ವಜನಿಕರು, ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.
ನಿಮ್ಮ ಕಾಮೆಂಟ್ ಬರೆಯಿರಿ