ಲೋಕಸಭಾ ಸದಸ್ಯತ್ವ ಅನರ್ಹತೆ ಪ್ರಕರಣ : ಆದೇಶಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ತಮ್ಮ ಆಯ್ಕೆ ಅನೂರ್ಜಿತಗೊಳಿಸಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವರೆಗೂ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಪ್ರಜ್ವಲ ರೇವಣ್ಣ ಮತ್ತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವರೆಗೂ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯಾಗಿರುವುದನ್ನು ಅನರ್ಹಗೊಳಿಸಿ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಸೆಪ್ಟೆಂಬರ್‌ 1ರಂದು ಆದೇಶಿಸಿತ್ತು. ಈ ಆದೇಶದ ಪ್ರತಿಯನ್ನು ಸಂಸತ್ ಸ್ಪೀಕರ್‌ಗೆ ಕಳುಹಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿತ್ತು. ಆದರೆ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದರ ಒಳಗೆ ಲೋಕಸಭೆಯ ಸ್ಪೀಕರ್ ತಮ್ಮ ಸದಸ್ಯತ್ವ ಅನರ್ಹಗೊಳಿಸಬಹುದು ಎಂದು ಆತಂಕ ವ್ಯಕ್ತಪಡಿಸಿರುವ ಪ್ರಜ್ವಲ್‌ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ಸೆಪ್ಟೆಂಬರ್‌ 1ರ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಪರ ವಕೀಲ ಎಂ. ಕೇಶವ ರೆಡ್ಡಿ ಅವರು ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆಗೆ ಬರಬೇಕಿದೆ.
ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ. ಚುನಾವಣೆ ಸಂದರ್ಭದಲ್ಲಿ ಹಲವು ಅಕ್ರಮ ನಡೆಸಿದ್ದಾರೆ. ಹಾಗಾಗಿ, ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ.ಮಂಜು ಹಾಗೂ ದೇವರಾಜೇಗೌಡ ಅವರು ಹೈಕೋರ್ಟ್‌ಗೆ 2019ರಲ್ಲಿ ಪ್ರತ್ಯೇಕ ಚುನಾವಣಾ ಅರ್ಜಿ ಸಲ್ಲಿಸಿದ್ದರು.
ಚುನಾವಣಾ ಅಕ್ರಮ ಪ್ರಕರಣ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಸದಸ್ಯತ್ವ ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್‌
ಅರ್ಜಿಗಳನ್ನು ಭಾಗಶಃ ಪುರಸ್ಕರಿಸಿದ್ದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ತೀರ್ಮಾನಿಸಿತ್ತು. ಹಾಗೂ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್‌ 1ರಂದು ಆದೇಶಿಸಿತ್ತು. ಅಲ್ಲದೆ, ಚುನಾವಣಾ ಅಕ್ರಮದಲ್ಲಿ ಶಾಮೀಲಾಗಿರುವ ಕಾರಣಕ್ಕೆ ಪ್ರಜ್ವಲ್ ಅವರ ತಂದೆ ಎಚ್ ಡಿ ರೇವಣ್ಣ ಮತ್ತು ಸಹೋದರ ಸೂರಜ್ ರೇವಣ್ಣಗೆ ನೋಟಿಸ್ ಸಹ ಜಾರಿಗೊಳಿಸಿತ್ತು.

ಪ್ರಮುಖ ಸುದ್ದಿ :-   ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement