ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆ ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಹೊಸದಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಬೆಂಗಳೂರಿನ ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ, ಬೆಳ್ತಂಗಡಿಯ ಜಿ ನವೀನಕುಮಾರ ಮತ್ತು ಬಲ್ವಾಡು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ಅರ್ಜಿದಾರರು ಎತ್ತಿರುವ ಮನವಿ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆಯಬಹುದು ಎಂದು ಅಭಿಪ್ರಾಯಪಟ್ಟು ನ್ಯಾಯಾಲಯವು ಅರ್ಜಿ ವಜಾಗೊಳಿಸಿತು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ಇದಕ್ಕೂ ಮುನ್ನ ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ ಶ್ಯಾಂ ಅವರು 2012ರಲ್ಲಿ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಘಟನೆ ನಡೆದಿದೆ. ಪ್ರಕರಣದ ಆರೋಪಿ ವಿರುದ್ಧ ಸೂಕ್ತ ಸಾಕ್ಷ್ಯಧಾರಗಳು ಇಲ್ಲ ಎಂಬ ಕಾರಣಕ್ಕೆ ಆತನನ್ನು ವಿಚಾರಣಾಧೀನ ನ್ಯಾಯಾಲಯ ಖುಲಾಸೆಗೊಳಿಸಿದೆ. ಆದರೆ, ಘಟನೆ ನಡೆದಿರುವುದು ನಿಜ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಅಂದರೆ ನಿಜವಾದ ದೋಷಿ ತಪ್ಪಿಸಿಕೊಂಡಿದ್ದಾರೆ. ಪ್ರಕರಣ ನಡೆದ ನಂತರ ತನಿಖಾಧಿಕಾರಿ ಮತ್ತು ವೈದ್ಯರಿಂದ ಕೆಲವೊಂದು ಲೋಪಗಳು ನಡೆದಿವೆ. ಇದರಿಂದ ಮರು ತನಿಖೆ ನಡೆಸಬೇಕು ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಹೀಗಾಗಿ, ಸಿಬಿಐ, ಇಲ್ಲವೇ ಸ್ವತಂತ್ರ ತನಿಖಾ ಸಂಸ್ಥೆ ಅಥವಾ ಎಸ್‌ಐಟಿಯಿಂದ ಹೊಸದಾಗಿ/ಮರು ತನಿಖೆ ನಡೆಸುವಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿದರು.

ಪ್ರಮುಖ ಸುದ್ದಿ :-   ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ ; ಪರಿಷತ್‌ ಸದಸ್ಯ ರವಿಕುಮಾರಗೆ ನಿರೀಕ್ಷಣಾ ಜಾಮೀನು

ಅದಕ್ಕೆ ಪ್ರತಿಕ್ರಿಯಿಸಿದ ಪೀಠವು ಪ್ರಕರಣದಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಮೇಲ್ಮನವಿಯಲ್ಲಿ ತನಿಖಾ ಲೋಪಗಳನ್ನು ಪರಿಗಣಿಸಬಹುದಾಗಿದೆ ಎಂದು ಹೇಳಿತು. ಆಗ ಅರುಣ ಶ್ಯಾಂ ಅವರು ಸಂತ್ರಸ್ತ ಕುಟುಂಬವು ಮೇಲ್ಮನವಿ ಸಲ್ಲಿಸಿಲ್ಲ ಎಂದು ಪೀಠದ ಗಮನಕ್ಕೆ ತಂದರು. ಆಗ ಪೀಠವು ಹಾಗಾದರೆ ಮೇಲ್ಮನವಿ ಸಲ್ಲಿಸಲು ಸಂತ್ರಸ್ತ ಕುಟುಂಬಕ್ಕೆ ನೀವು ಸಹಾಯ ಮಾಡಿ ಎಂಬುದಾಗಿ ಸಲಹೆ ನೀಡಿತು. ಅಲ್ಲದೆ, ಸಾರ್ವಜನಿಕರ ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದಿದ್ದರೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಾನೂನಿನ ಮಿತಿ ಅರಿತು ವ್ಯವಹರಿಸಬೇಕಾಗುತ್ತದೆ. ಅದರಂತೆ ಅರ್ಜಿ ಹಿಂಪಡೆದು ನಿಮ್ಮ ಮನವಿಗಳ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆದುಕೊಳ್ಳಬಹುದು ಎಂದು ತಿಳಿಸಿತು.
ಅರ್ಜಿ ಹಿಂಪಡೆಯಲು ನಿರಾಕರಿಸಿದ ಅರ್ಜಿದಾರ ಪರ ವಕೀಲರು, ಅರ್ಜಿ ಸಂಬಂಧ ಮೆರಿಟ್ ಮೇಲೆ ನ್ಯಾಯಾಲಯವು ಆದೇಶ ಮಾಡಬೇಕು ಎಂದು ಕೋರಿದರು. ಅದಕ್ಕೆ ಒಪ್ಪಿದ ಪೀಠವು ಅರ್ಜಿಯನ್ನು ವಜಾಗೊಳಿಸಲಾಗಿದೆ. ಆ ಕುರಿತು ವಿವರವಾದ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿತು..

ಪ್ರಮುಖ ಸುದ್ದಿ :-   ಅತ್ಯಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement