ಮೂರು ಡಿಸಿಎಂಗಳು ಬೇಕು, ಕಾಂಗ್ರೆಸ್‌ ಹೈಕಮಾಂಡಿಗೆ ಪತ್ರ ಬರೆಯುವೆ : ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆಗೆ ಕಾಂಗ್ರೆಸ್‌ನಲ್ಲಿ ಸಂಚಲನ

ತುಮಕೂರು: ಸಚಿವ ಕೆ.ಎನ್.ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಕೈ ಪಾಳಯದಲ್ಲಿ ಸಂಚಲನವನ್ನು ಸೃಷ್ಟಿಸಿದೆ. ಡಿ.ಕೆ. ಶಿವಕುಮಾರ ಜತೆಗೆ ಇನ್ನೂ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಕೋರಿ ಹೈಕಮಾಂಡ್‌ಗೆ ಪತ್ರ ಬರೆಯುತ್ತೇನೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ ಅವರು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಇನ್ನೂ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಬೇಕು ಎಂಬುದು ನನ್ನ ಅಭಿಪ್ರಾಯವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನ ಗೆಲ್ಲಲು ಎಸ್ಸಿ-ಎಸ್ಟಿ ಹಾಗೂ ಅಲ್ಪಸಂಖ್ಯಾತರು, ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿರುವುದು ಕಾರಣವಾಗಿದೆ. ಹೀಗಾಗಿ ಆ ಸಮುದಾಯಗಳಿಗೂ ಆದ್ಯತೆ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.
ಈ ಬಗ್ಗೆ ಹೈಕಮಾಂಡ್‌ ಗಮನಕ್ಕೆ ತರಲು ನಿರ್ಧರಿಸಿದ್ದೇನೆ. ಅಕ್ಟೋಬರ್‌ ಮೊದಲ ವಾರ ಹೈಕಮಾಂಡ್‌ ಭೇಟಿಯಾಗಿ ಮನವಿ ಮಾಡುತ್ತೇನೆ ಎಂದ ಅವರು, ಈ ಬಗ್ಗೆ ಯಾರೊಂದಿಗೂ ಚರ್ಚಿಸಿಲ್ಲ. ಪಕ್ಷದ ಹಿರಿಯ ನಾಯಕರೊಂದಿಗೂ ಚರ್ಚಿಸಬೇಕೆಂದಿದ್ದೇನೆ ಎಂದು ತಿಳಿಸಿದರು.
ಇದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ವಿರುದ್ಧ ಎಂದು ಭಾವಿಸುವುದು ಬೇಡ. ಆ ರೀತಿ ಯಾವುದೇ ಭಾವನೆ ಇಲ್ಲ. ಆದರೆ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಲಿ ಎಂಬುದು ನನ್ನ ಸಲಹೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿಯೂ ಮೂವರು ಉಪಮುಖ್ಯಮಂತ್ರಿ ಇರಲಿಲ್ಲವೇ? ನಮ್ಮಲ್ಲಿಯೂ ಇದ್ದರೆ ತಪ್ಪೇನು? ಇದು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನೆರವಾಗಲಿದೆ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement