ಕಾವೇರಿ ವಿವಾದ: ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕೇಂದ್ರ ಜಲಶಕ್ತಿ ಸಚಿವರ ಭೇಟಿ

ನವದೆಹಲಿ : ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯದ ಜನಪ್ರತಿನಿಧಿಗಳು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಗುರುವಾರ ಭೇಟಿಯಾಗಿದ್ದಾರೆ.
ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಗಜೇಂದ್ರ ಸಿಂಗ್ ಶೇಖಾವತ್ ನಿವಾಸದಲ್ಲಿ ಭೇಟಿಯಾಗಿ ನೀರು ಹಂಚಿಕೆ ವಿವಾದದ ಕುರಿತು ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕೇಂದ್ರದ ಸಚಿವರು ಹಾಗೂ ಸಂಸದರೊಂದಿಗೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಮಾತುಕತೆ ನಡೆಸಿದರು.
ಈ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ರಾಜ್ಯದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚಲುವರಾಯಸ್ವಾಮಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಮಗೆ ನೀರು ಬಿಡಬಾರದೆಂಬ ಉದ್ದೇಶವಿಲ್ಲ, ಆದರೆ ಮಳೆ ಕೊರತೆಯಿಂದ ನಮ್ಮ ಜಲಾಶಯಗಳಲ್ಲೇ ನೀರಿಲ್ಲ, ನೀರಿಲ್ಲದೇ ಬಿಡುವುದು ಹೇಗೆ. ಆದರೆ ನೀರು ಬಿಡುಗಡೆ ಮಾಡಿ ಎಂದು ಆದೇಶ ಬರುತ್ತಲೇ ಇದೆ. ಹೀಗಾಗಿ ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು, ಸಂಕಷ್ಟ ಸೂತ್ರ ರಚಿಸಿ ನೆರವಿಗೆ ಬರಬೇಕು ಎಂದು ನಿಯೋಗ ಒತ್ತಾಯಿಸಿತು.
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದ ಕುರಿತು ಇಂದು, ಗುರುವಾರ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ತಮಿಳುನಾಡಿಗೆ ಪ್ರತಿ ನಿತ್ಯವೂ ಐದು ಟಿಎಂಸಿ ನೀರು ಬಿಡಲೇಬೇಕು ಎಂದು ತಾಕೀತು ಮಾಡಿದೆ. ನೀರಿಲ್ಲದ ಸಮಯದಲ್ಲಿಯೂ ಪದೇಪದೆ ಆದೇಶ ಎತ್ತಿ ಹಿಡಿದು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆಕ್ಷೇಪಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶಗಳನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮನವಿಯನ್ನು ಸಲ್ಲಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊ : ಯಡವಟ್ಟಿನಿಂದ ಚಾಲಕನೇ ಇಲ್ಲದೆ ಗಂಟೆಗೆ 100 ಕಿಮೀ ವೇಗದಲ್ಲಿ 70 ಕಿಮೀ ದೂರ ಓಡಿದ ರೈಲು..: ಆಗಿದ್ದೇನೆಂದರೆ..| ವೀಕ್ಷಿಸಿ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement